ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಕಳೆದರೆಡು ದಿನಗಳಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದ ಮಲೆನಾಡು ಪ್ರದೇಶದಲ್ಲಿ ಗುಡ್ಡ ಕುಸಿತವಾಗುತ್ತಿದ್ದು, ಸುರಕ್ಷತೆ ದೃಷ್ಟಿಯಿಂದ ಆಗುಂಬೆ ಘಾಟಿಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಜಿಲ್ಲಾಡಳಿತ ಶುಕ್ರವಾರ ಆದೇಶ ಹೊರಡಿಸಿದೆ.
ನಿರಂತರ ಮಳೆ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಯಿದ್ದು, ಜೂ.27ರಿಂದ ಸೆಪ್ಟೆಂಬರ್ 15ರವರೆಗೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಬದಲಿ ಮಾರ್ಗ ಸೂಚಿಸಿ ಶಿವಮೊಗ್ಗ ಡಿಸಿ ಆದೇಶ ಹೊರಡಿಸಿದ್ದಾರೆ. ಬದಲಿ ಮಾರ್ಗವನ್ನು ಗುರುತಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ನೀಡಿದ್ದಾರೆ. ಆಗುಂಬೆ ಘಾಟಿಯಲ್ಲಿ ಮಳೆಗಾಲದ ಅವಧಿಯಲ್ಲಿ ಭೂಕುಸಿತವಾಗುವ ಸಂಭವ ಇರುವುದರಿಂದ ಜೂ.27ರಿಂದ ಸೆ.15ರವರೆಗೆ ಭಾರೀ ವಾಹನ ಸಂಚರಿಸದಂತೆ ಆದೇಶಿಸಲಾಗಿದೆ. ತೀರ್ಥಹಳ್ಳಿಯಿಂದ ಉಡುಪಿಗೆ ಹೋಗುವ ಭಾರೀ ವಾಹನಗಳು ತೀರ್ಥಹಳ್ಳಿ -ಮಾಸ್ತಿಕಟ್ಟೆ- ಸಿದ್ದಾಪುರ-ಕುಂದಾಪುರ ಮೂಲಕ ಉಡುಪಿ ತಲುಪಬಹುದು. ಉಡುಪಿಯಿಂದ ತೀರ್ಥಹಳ್ಳಿ ಬರುವವರು ಉಡುಪಿ-ಕುಂದಾಪುರ-ಸಿದ್ದಾಪುರ-ಮಾಸ್ತಿಕಟ್ಟೆ ಮೂಲಕ ತೀರ್ಥಹಳ್ಳಿಗೆ ಸಂಚರಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.