ಬೆಂಗಳೂರು: ಈಗಾಗಲೇ ರಾಜ್ಯದ ರಾಜಧಾನಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಬುಧವಾರದಿಂದ (ಅ.16) ರಾಜ್ಯಾದ್ಯಂತ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬುಧವಾರದಿಂದ ಕರಾವಳಿ ಹಾಗೂ ಒಳನಾಡು ಭಾಗದಲ್ಲಿ ಮಳೆ ಅಧಿಕವಾಗಿ ಸುರಿಯಲಿದೆ. ಆದ್ದರಿಂದ, ಅ.16 ಮತ್ತು 17ಕ್ಕೆ ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಅ.18ಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಯಾವ ಜಿಲ್ಲೆಗೆ ಏನು ಎಚ್ಚರಿಕೆ:
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಅ.18ಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅ.18 ಮತ್ತು 19ರಂದು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅ.18ಕ್ಕೆ ತುಮಕೂರು, ಶಿವಮೊಗ್ಗ, ರಾಮನಗರ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಹವಾಮಾನ ವರದಿ ಪ್ರಕಾರ ಭಾನುವಾರ ಕಾರ್ಕಳ, ಬಾಳೆಹೊನ್ನೂರಿನಲ್ಲಿ ಅತಿ ಹೆಚ್ಚು ಅಂದರೆ ತಲಾ 5 ಸೆಂ.ಮೀ. ಮಳೆಯಾಗಿದೆ. ನಂಜನಗೂಡು, ಜಯಪುರದಲ್ಲಿ ತಲಾ 4, ಬೆಳ್ಳೂರು, ಸೋಮವಾರಪೇಟೆ, ಸರಗೂರಿನಲ್ಲಿ ತಲಾ 3, ಉಪ್ಪಿನಂಗಡಿ, ಕದ್ರಾ ಸೇರಿ ವಿವಿಧೆಡೆ 2 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




