ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಬೆಳವಣಿಗೆ ಆಗುತ್ತಿದ್ದು, ಬಹು ನಿರೀಕ್ಷಿತ 3 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ.
ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಾದ ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ನ.13ರಂದು ಮತದಾನ ಹಾಗೂ ನ.23ರಂದು ಮತ ಎಣಿಕೆ (ಫಲಿತಾಂಶ) ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಅಧಿಕೃತವಾಗಿ ಮಂಗಳವಾರ ಘೋಷಣೆ ಮಾಡಿದೆ.
ಮಹರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಲು ಮಂಗಳವಾರ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಚುನಾವಣಾ ಆಯುಕ್ತರು, ಕರ್ನಾಟಕದ 3 ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಿಗೂ ದಿನಾಂಕ ನಿಗದಿ ಮಾಡಿದ್ದಾರೆ.
ಪ್ರತಿಷ್ಠೆಯ ಕಣ:
ಮುಡಾ ಮತ್ತು ವಾಲ್ಮೀಕಿ ಹಗರಣ ಸೇರಿದಂತೆ ಹಲವು ಸಂಕಷ್ಟಗಳು ಕಾಂಗ್ರೆಸ್ ಸರ್ಕಾರವನ್ನು ಸುತ್ತಿಕೊಂಡಿದ್ದು, ವಿರೋಧ ಪಕ್ಷ ಬಿಜೆಪಿ ಈಗಾಗಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿದೆ. ಅಲ್ಲದೇ ರಾಜ್ಯಾದ್ಯಂತ ಜೆಡಿಎಸ್ ಜತೆಗೂಡಿ ಹೋರಾಟ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಉಪ ಚುನಾವಣೆಯಲ್ಲಿ ಯಾವ ಪಕ್ಷ ಮೇಲುಗೈ ಸಾಧಿಸಲಿದೆ ಎಂದು ಕಾದು ನೋಡಬೇಕಿದೆ. ಆಡಳಿತ ಕಾಂಗ್ರೆಸ್ ಪಕ್ಷಕ್ಕೆ ಈ ಉಪ ಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ಅದರಲ್ಲೂ ಚನ್ನಪಟ್ಟಣ ಕ್ಷೇತ್ರ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಹಾಗೂ ಜೆಡಿಎಸ್ ಅಧ್ಯಕ್ಷ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನಡುವೆ ಬಹುದೊಡ್ಡ ಕದನ ಸೃಷ್ಟಿಸಿದ್ದು, ಗೆಲುವಿಗಾಗಿ ಹಲವಾರು ತಂತ್ರ ರೂಪಿಸುತ್ತಿದ್ದಾರೆ.