ಆಯುರ್ವೇದದಿಂದ ರೋಗ ಬಾರದಂತೆ ತಡೆಯಲು ಸಾಧ್ಯ; ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ

ಕಾರವಾರ: ನಮ್ಮ ದೇಶದಲ್ಲಿ ಸಾವಿರಾರು ವರ್ಷಗಳಿಂದ ಬಳಕೆಯಲ್ಲಿರುವ ಆಯುರ್ವೇದ ಚಿಕಿತ್ಸಾ ಪದ್ಧತಿಯು ಇಂದು ವಿಶ್ವದಾದ್ಯಂತ ಪ್ರಸಿದ್ದಿ ಪಡೆದಿದ್ದು, ಆಯುರ್ವೇದ ಬಳಕೆಯಿಂದ ಹಲವು ರೋಗಗಳು ಬಾರದಂತೆ ತಡೆಯಲು ಸಾಧ್ಯವಿರುವುದರಿಂದ ಆಯುರ್ವೇದವನ್ನು ಪ್ರತಿಯೊಬ್ಬರೂ ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು…

ಕಾರವಾರ: ನಮ್ಮ ದೇಶದಲ್ಲಿ ಸಾವಿರಾರು ವರ್ಷಗಳಿಂದ ಬಳಕೆಯಲ್ಲಿರುವ ಆಯುರ್ವೇದ ಚಿಕಿತ್ಸಾ ಪದ್ಧತಿಯು ಇಂದು ವಿಶ್ವದಾದ್ಯಂತ ಪ್ರಸಿದ್ದಿ ಪಡೆದಿದ್ದು, ಆಯುರ್ವೇದ ಬಳಕೆಯಿಂದ ಹಲವು ರೋಗಗಳು ಬಾರದಂತೆ ತಡೆಯಲು ಸಾಧ್ಯವಿರುವುದರಿಂದ ಆಯುರ್ವೇದವನ್ನು ಪ್ರತಿಯೊಬ್ಬರೂ ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಹೇಳಿದರು.

ಅವರು ಮಂಗಳವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಉತ್ತರ ಕನ್ನಡ ಜಿಲ್ಲೆ, ಆಯುಷ್ ಇಲಾಖೆ ಉತ್ತರ ಕನ್ನಡ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಕಾರವಾರ, ನಗರಸಭೆ ಕಾರವಾರ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಸರ್ಕಾರಿ ನೌಕರರ ಭವನದಲ್ಲಿ ಧನ್ವಂತರಿ ಜಯಂತಿಯ ಅಂಗವಾಗಿ ನಡೆದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆಯುರ್ವೇದವು ಯಾವುದೇ ರೋಗಗಳು ಬಾರದಂತೆ ತಡೆದು ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗಿದ್ದು, ಈ ಬಗ್ಗೆ ವ್ಯಾಪಕವಾಗಿ ಅರಿವು ಮೂಡಿಸುವ ಕಾರ್ಯ ನಡೆಯಬೇಕಿದೆ. ಜಿಲ್ಲೆಯಲ್ಲಿ ಆಯುಷ್ ಇಲಾಖೆಯ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಯನ್ನು ನೇಮಕ ಮಾಡಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದ ಜಿಲ್ಲಾಧಿಕಾರಿಗಳು, ಆಯುಷ್ ಇಲಾಖೆಯಲ್ಲಿನ ಯೋಗ ಶಿಕ್ಷಕರ ಮೂಲಕ ಜಿಲ್ಲೆಯ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರಿಗೆ ತರಬೇತಿ ಕೊಡಿಸಿ, ಆ ಮೂಲಕ ಶಾಲೆಯಲ್ಲಿ ಮಕ್ಕಳಿಗೆ ಯೋಗ ಕಲಿಸುವ ಮೂಲಕ, ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

Vijayaprabha Mobile App free

ಆಯುರ್ವೇದದಲ್ಲಿ ಬಳಕೆ ಮಾಡುವ ಹಲವು ಔಷಧಿಯ ಸಸ್ಯಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದರ ಜೊತೆಗೆ ಸಾಮಾಜಿಕ ಅರಣ್ಯ ಇಲಾಖೆ ಮತ್ತು ನರೇಗಾ ಮೂಲಕ ಔಷಧಿಯ ಸಸ್ಯಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಸಲು ಕ್ರಮ ಕೈಗೊಳ್ಳಬೇಕು. ಆಯುಷ್ ಆಸ್ಪತ್ರೆಗಳ ಆವರಣದಲ್ಲಿ ಔಷಧಿಯ ಸಸ್ಯಗಳನ್ನು ಬೆಳೆಸಿ, ಸಾರ್ವಜನಿಕರಿಗೆ ಅವುಗಳ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ರವಿರಾಜ ಆಂಕೋಲೆಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಆನಂದ್‌ಸಾ ಹಬೀಬ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಅನ್ನಪೂರ್ಣ ವಸ್ತ್ರದ್, ತಾಲೂಕು ಆರೋಗ್ಯಾಧಿಕಾರಿ ಡಾ.ಸೂರಜ್ ನಾಯಕ, ಬ್ರಹ್ಮ ಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಕವಿತಾ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಲಲಿತಾ ಶೆಟ್ಟಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಔಷಧೀಯ ಸಸ್ಯಗಳ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ, ಆಯರ್ವೇದ ವೈದ್ಯರಿಂದ ವಿವಿಧ ವಿಷಯಗಳ ಬಗ್ಗೆ ಉಪನ್ಯಾಸ ನಡೆಯಿತು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.