ಕಾರವಾರ: ಮಕ್ಕಳು ತಮ್ಮ ಮೇಲೆ ನಡೆಯುವ ದೌರ್ಜನ್ಯಗಳ ಕುರಿತಂತೆ ಆರಂಭದಲ್ಲಿಯೇ ತಮ್ಮದೇ ಆದ ಭಾಷೆಯಲ್ಲಿ ತಿಳಿಸುವ ಪ್ರಯತ್ನ ಮಾಡುತ್ತಾರೆ. ಪೋಷಕರು ಮಕ್ಕಳ ಮಾತುಗಳನ್ನು ಆಲಿಸಿ, ಅವರಲ್ಲಿನ ಬದಲಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸುವ ಮೂಲಕ ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಯಬೇಕು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉತ್ತರ ಕನ್ನಡ ಇವರ ಸಂಯುಕ್ತಾಶ್ರಯದಲ್ಲಿ “ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016, ತಿದ್ದುಪಡಿ -2023ರ ಮಕ್ಕಳ ಸಂರಕ್ಷಣೆಗಾಗಿರುವ ವಿವಿಧ ಹಂತಗಳ ಮಕ್ಕಳ ಸಂರಕ್ಷಣಾ ಸಮಿತಿಗಳ ಕಾರ್ಯವಿಧಾನ ಹಾಗೂ ಮಕ್ಕಳಿಗೆ ಸಂಬಂಧಿಸಿದ ಕಾನೂನುಗಳ ಅನುಷ್ಠಾನದಲ್ಲಿ ವಿವಿಧ ಅಧಿಕಾರಿಗಳಿಗೆ ಕರ್ತವ್ಯ, ಜವಾಬ್ದಾರಿಗಳ ಕುರಿತು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಲ್ಲಿ ಶೇ.70 ರಷ್ಟು, ಮಕ್ಕಳಿಗೆ ಸುರಕ್ಷಿತ ಎಂದು ಕಂಡುಬರುವ ಸ್ಥಳಗಳಲ್ಲೇ ನಡೆಯುತ್ತವೆ. ಶಾಲೆಗಳಲ್ಲಿ, ಮನೆಗಳಲ್ಲಿ, ಅಪರಿಚಿತರಿಗಿಂತ ಪರಿಚಿತ ವ್ಯಕ್ತಿಗಳಿಂದಲೇ ಹೆಚ್ಚು ದೌರ್ಜನ್ಯ ನಡೆಯಲಿದ್ದು, ಹೆಣ್ಣು ಮಕ್ಕಳು ಮಾತ್ರವಲ್ಲದೇ ಗಂಡು ಮಕ್ಕಳ ಮೇಲೆಯೂ ನಡೆಯಲಿದ್ದು, ಇಂತಹ ಸಂದರ್ಭದಲ್ಲಿ ಪೋಷಕರು ಮಕ್ಕಳಲ್ಲಾಗುವ ಬದಲಾವಣೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಬೇಕು ಎಂದರು.
ಪೋಷಕರು ಮತ್ತು ಶಾಲಾ ಶಿಕ್ಷಕರ ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಯುವಲ್ಲಿ ಪ್ರಮುಖವಾದ ಜವಾಬ್ದಾರಿ ವಹಿಸಲಿದ್ದು, ಮಕ್ಕಳಿಗೆ ಸೂಕ್ತ ಅರಿವು ಮೂಡಿಸಬೇಕು. ಪ್ರಕರಣಗಳು ನಡೆದಲ್ಲಿ ತಕ್ಷಣವೇ ತಮ್ಮ ಗಮನಕ್ಕೆ ತರುವಂತೆ ತಿಳಿಸಬೇಕು. ಮಕ್ಕಳ ಸುರಕ್ಷತೆಗೆ ಗರಿಷ್ಠ ಆದ್ಯತೆ ನೀಡುವ ಮೂಲಕ ಮಕ್ಕಳಿಗಾಗಿ, ಸುರಕ್ಷಿತ ಮತ್ತು ಉತ್ತಮ ಸಮಾಜ ನಿರ್ಮಿಸುವ ಹೊಣೆಗಾರಿಕೆ ಸಮಾಜದಲ್ಲಿನ ಪ್ರತಿಯೊಬ್ಬರಿಗೂ ಇದೆ ಎಂದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಮಾತನಾಡಿ, ಸಮಾಜದಲ್ಲಿ ಮೌಲ್ಯಗಳ ಕುಸಿತದಿಂದಾಗಿ ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಮಕ್ಕಳ ರಕ್ಷಣೆಯ ಚಟುವಟಿಕೆಗಳು ಕುಟುಂಬಗಳಲ್ಲಿಯೇ ಆರಂಭವಾಗಬೇಕು. ಮಕ್ಕಳ ಹಕ್ಕುಗಳ ರಕ್ಷಣೆಯು ಯಾವುದೇ ಒಂದು ಇಲಾಖೆಯ ಜವಾಬ್ದಾರಿಯಾಗದೇ ಪ್ರತಿಯೊಂದು ಇಲಾಖೆಯ ಜವಾಬ್ದಾರಿಯಾಗಿದೆ. ಈ ಕುರಿತಂತೆ ಗ್ರಾಮ, ತಾಲೂಕು, ಜಿಲ್ಲಾ ಮಟ್ಟದಲ್ಲಿ ರಚನೆಯಾಗಿರುವ ಸಮಿತಿಗಳು ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆಯಲ್ಲಿ ಮಕ್ಕಳ ಸ್ನೇಹಿ ಸುರಕ್ಷಿತ ವಾತಾವರಣ ನಿರ್ಮಾಣ ಮಾಡಬೇಕು ಎಂದರು.
ಕಾರ್ಯಗಾರದಲ್ಲಿ ವಿಶೇಷ ಉಪನ್ಯಾಸ ನೀಡಿದ ಡಾ. ರಾಘವೇಂದ್ರ ಭಟ್, ಮಕ್ಕಳ ಹಕ್ಕುಗಳ ರಕ್ಷಣೆಯಿಂದ ಮಾತ್ರ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಬೆಳವಣಿಗೆ ಕಾಣಲು ಸಾಧ್ಯ. ಮಕ್ಕಳ ರಕ್ಷಣಾ ನೀತಿಯ ಅನುಷ್ಠಾನಕ್ಕಾಗಿ ಜಿಲ್ಲೆಯ ವಿವಿಧ ಅಧಿಕಾರಿಗಳು ಹಲವು ಜವಾಬ್ದಾರಿಗಳನ್ನು ವಹಿಸಲಾಗಿದ್ದು, ಈ ಕಾರ್ಯದಲ್ಲಿ ಎಲ್ಲಾ ಅಧಿಕಾರಿಗಳು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ, ಮಕ್ಕಳ ಮೇಲಿನ ದೌರ್ಜನ್ಯ, ಬಾಲ್ಯ ವಿವಾಹ, ಬಾಲ ಮತ್ತು ಕಿಶೋರ ಕಾರ್ಮಿಕರ ಪ್ರಕರಣ, ಮಕ್ಕಳ ಕಾಣೆ ಪ್ರಕರಣ ಮತ್ತು ಶಾಲೆ ಬಿಟ್ಟ ಮಕ್ಕಳ ಸಂಖ್ಯೆಯಲ್ಲಿ ಶೂನ್ಯ ದಾಖಲೆ ಮಾಡಬೇಕು. ಮಕ್ಕಳ ಸಂರಕ್ಷಣೆಯ ಕಾರ್ಯದಲ್ಲಿ ಯಾವುದೇ ಹಂತದಲ್ಲೂ ನಿರ್ಲಕ್ಷ್ಯ ವಹಿಸಬಾರದು ಎಂದರು.
ಕಾರ್ಯಕ್ರಮದಲ್ಲಿ ಮಕ್ಕಳ ಸಂರಕ್ಷಣೆ ಕುರಿತು ಕರಪತ್ರ ಮತ್ತು ಮಾಹಿತಿ ಪತ್ರಗಳ ಬಿಡುಗಡೆ, ಪ್ರತಿಜ್ಞಾ ವಚನ ಸ್ವೀಕಾರ ಹಾಗೂ ಇಬ್ಬರು ಮಕ್ಕಳನ್ನು ದತ್ತು ನೀಡುವ ಕಾರ್ಯಕ್ರಮ ನಡೆಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿರೂಪಾಕ್ಷ ಗೌಡ ಪಾಟೀಲ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೋನಲ್ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.