ಬೆಂಗಳೂರು: ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪೊಲೀಸರು ಮಾದಕ ವಸ್ತುಗಳ ವಿರುದ್ಧ ತಮ್ಮ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ನಗರದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಆಫ್ರಿಕಾ ಪ್ರಜೆ ಸೇರಿ ಮೂವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಕೌಸ್ಸಿ ಜೂಲಿಯಸ್ ಗಿಸ್ಸರ್ ಬಂಧಿತ ವಿದೇಶಿ ಪ್ರಜೆಯಾಗಿದ್ದಾನೆ.
ಈತ ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯ ಆರ್.ಆರ್.ಕಾಲೇಜು ರಸ್ತೆ ಮಾರ್ಗದಲ್ಲಿ ಎಂಡಿಎಂಎ ಕ್ರಿಸ್ಟಲ್ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ. ಕಳೆದ 2017ರಲ್ಲಿ ಬ್ಯುಸಿನೆಸ್ ವೀಸಾ ಮೇಲೆ ಭಾರತಕ್ಕೆ ಬಂದಿದ್ದ ಕೌಸ್ಸಿ ಜೂಲಿಯಸ್ ಕಡಿಮೆ ಬೆಲೆಯಲ್ಲಿ ಎಂಡಿಎಂಎ ಕ್ರಿಸ್ಟಲ್‌ಗಳನ್ನು ಖರೀದಿಸಿ ಅದನ್ನು ಗ್ರಾಂಗೆ 12 ರಿಂದ 15 ಸಾವಿರದಂತೆ ಐಟಿ-ಬಿಟಿ ಉದ್ಯೋಗಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಾರತ್‌ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಬರೋಬ್ಬರಿ 86.50 ಲಕ್ಷ ಮೌಲ್ಯದ ವಿವಿಧ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.