ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026ರ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ (Karnataka Budget 2026) ಕಾನೂನು ಮತ್ತು ಸುವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ರಾಜ್ಯದ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ರಾಜ್ಯಾದ್ಯಂತ ಒಟ್ಟು 12 ಹೊಸ ಪೊಲೀಸ್ ಠಾಣೆಗಳನ್ನು (New Police Stations) ಆರಂಭಿಸುವುದಾಗಿ ಸಿಎಂ ಬಜೆಟ್‌ನಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ.

ಬಜೆಟ್ 2026: ಎಲ್ಲೆಲ್ಲಿ ಬರಲಿವೆ ಹೊಸ ಠಾಣೆಗಳು?
ಬೆಳೆಯುತ್ತಿರುವ ಜನಸಂಖ್ಯೆ ಮತ್ತು ಭದ್ರತೆಯ ದೃಷ್ಟಿಯಿಂದ ರಾಜ್ಯದ ಒಟ್ಟು 11 ಜಿಲ್ಲೆಗಳಲ್ಲಿ ಈ ಹೊಸ ಪೊಲೀಸ್ ಠಾಣೆಗಳು ತಲೆ ಎತ್ತಲಿವೆ:
ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ 2 ಕಡೆಗಳಲ್ಲಿ ಹೊಸ ಪೊಲೀಸ್ ಠಾಣೆಗಳು ನಿರ್ಮಾಣವಾಗಲಿವೆ.
ಉಳಿದಂತೆ ಮಧ್ಯಕರ್ನಾಟಕದ ಪ್ರಮುಖ ಜಿಲ್ಲೆಯಾದ ದಾವಣಗೆರೆ ಮತ್ತು ಬಯಲುಸೀಮೆಯ ಕೋಲಾರ ಸೇರಿದಂತೆ ರಾಜ್ಯದ ವಿವಿಧ 11 ಜಿಲ್ಲೆಗಳ ಆಯ್ದ ಭಾಗಗಳಲ್ಲಿ ಹೊಸ ಠಾಣೆಗಳು ಕಾರ್ಯಾರಂಭ ಮಾಡಲಿವೆ.
“ಸಾರ್ವಜನಿಕರ ರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಆದ್ಯತೆಯಾಗಿದ್ದು, ಭದ್ರತಾ ದೃಷ್ಟಿಯಿಂದ ಹೊಸ ಠಾಣೆಗಳ ಸ್ಥಾಪನೆಗೆ ಅಗತ್ಯ ಅನುದಾನ ಮೀಸಲಿಡಲಾಗಿದೆ” ಎಂದು ಮುಖ್ಯಮಂತ್ರಿಗಳು ತಮ್ಮ ಬಜೆಟ್ ಭಾಷಣದಲ್ಲಿ ಸ್ಪಷ್ಟಪಡಿಸಿದ್ದಾರೆ.




