ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿಂದು ಮಂಡಿಸಿರುವ ತಮ್ಮ ದಾಖಲೆಯ 17ನೇ ರಾಜ್ಯ ಬಜೆಟ್ನಲ್ಲಿ, ಮಕ್ಕಳ ಭವಿಷ್ಯ ಮತ್ತು ಶಿಕ್ಷಣ ಕ್ಷೇತ್ರದ ದೃಷ್ಟಿಯಿಂದ ಅತ್ಯಂತ ಮಹತ್ವದ ಹಾಗೂ ದಿಟ್ಟ ನಿರ್ಧಾರವೊಂದನ್ನು ಪ್ರಕಟಿಸಿದ್ದಾರೆ. ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ (Social Media) ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಐತಿಹಾಸಿಕ ಘೋಷಣೆಯನ್ನು ಸಿಎಂ ಮಾಡಿದ್ದಾರೆ.
ಬಜೆಟ್ 2026: ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್ ಮಾಡಿದ್ದೇಕೆ?
ಇತ್ತೀಚಿನ ದಿನಗಳಲ್ಲಿ ಶಾಲಾ ಮಕ್ಕಳು ಫೇಸ್ಬುಕ್, ಇನ್ಸ್ಟಾಗ್ರಾಮ್ ಮುಂತಾದ ಸಾಮಾಜಿಕ ಜಾಲತಾಣಗಳ ದಾಸರಾಗುತ್ತಿದ್ದು, ಇದು ಅವರ ಓದು ಮತ್ತು ಮಾನಸಿಕ ಆರೋಗ್ಯದ ಮೇಲೆ ತೀವ್ರ ನಕಾರಾತ್ಮಕ ಪರಿಣಾಮ ಬೀರುತ್ತಿದೆ.
ಮಕ್ಕಳ ಹಿತರಕ್ಷಣೆ, ಸೈಬರ್ ಸುರಕ್ಷತೆ (Cyber safety) ಹಾಗೂ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಸರ್ಕಾರ ಈ ಕಠಿಣ ನಿರ್ಧಾರ ಕೈಗೊಂಡಿದೆ.
ಎಳೆಯ ವಯಸ್ಸಿನಲ್ಲೇ ಮಕ್ಕಳ ಮನಸ್ಸಿನ ಮೇಲೆ ಬೀರುತ್ತಿರುವ ದುಷ್ಪರಿಣಾಮಗಳನ್ನು ತಡೆಯಲು ಮತ್ತು ಅವರನ್ನು ಶೈಕ್ಷಣಿಕ ಚಟುವಟಿಕೆಗಳತ್ತ ಸೆಳೆಯಲು ಈ ಕ್ರಮ ಅತ್ಯಗತ್ಯವಾಗಿತ್ತು ಎಂದು ಬಜೆಟ್ ಭಾಷಣದಲ್ಲಿ ವಿವರಿಸಲಾಗಿದೆ. ಸರ್ಕಾರದ ಈ ನಿರ್ಧಾರಕ್ಕೆ ಪೋಷಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುವ ನಿರೀಕ್ಷೆಯಿದೆ.
15,000 ಶಿಕ್ಷಕರ ಬೃಹತ್ ನೇಮಕಾತಿ! ಮಕ್ಕಳ ಸುರಕ್ಷತೆಯ ಜೊತೆಗೆ ರಾಜ್ಯದ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಸರ್ಕಾರ ಮುಂದಾಗಿದೆ. ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು, ಒಟ್ಟು 15,000 ಹೊಸ ಶಿಕ್ಷಕರನ್ನು ನೇಮಕಾತಿ (Teacher Recruitment) ಮಾಡಿಕೊಳ್ಳಲು ಬಜೆಟ್ನಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದರಿಂದ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಹಾಗೂ ಬೋಧನಾ ಗುಣಮಟ್ಟ ಮತ್ತಷ್ಟು ಹೆಚ್ಚಾಗಲಿದೆ.




