ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಕರಾವಳಿ ಪ್ರದೇಶ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಜೂನ್ 30 ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆಯಿದೆ. ಜೂನ್ 28ರಿಂದ 2 ದಿನಗಳ ಕಾಲ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಜೂನ್ 28ರವರೆಗೆ ಸಾಧಾರಣ ಮಳೆಯಾಗಲಿದೆ. ಇನ್ನು, ಗುಡುಗು ಸಹಿತ ಭಾರೀ ಮಳೆಯಾಗುವ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ಜೂನ್ 27ರಿಂದ 30ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು, ಬೆಂಗಳೂರಿನಲ್ಲಿ ಕೂಡ ಇಂದು ಮಳೆಯಾಗುವ ಸಾಧ್ಯತೆಯಿದ್ದು, ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ಸಹ ಮತ್ತೊಂದು ಹಂತದ ಮಳೆ ಮತ್ತೆ ಶುರುವಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.