ಬೆಂಗಳೂರು: ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಮವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕೇಸರಿ ಶಾಲು, ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ.
ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಯಾರಿಗೂ ಅವಕಾಶ ನೀಡುವುದಿಲ್ಲವೆಂದು, ಈ ಕುರಿತು ಕರ್ನಾಟಕ ಶಿಕ್ಷಣ ಕಾಯ್ದೆಯ ಅನ್ವಯ ಸುತ್ತೋಲೆ ಪ್ರಕಟಿಸಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸ್ಪಷ್ಟಪಡಿಸಿದರು. ಇನ್ನು, ಉಡುಪಿಯ ಕುಂದಾಪುರ ಸರ್ಕಾರಿ ಕಾಲೇಜಿನ ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮಾಹಿತಿ ನೀಡಿದರು.
ಇನ್ನು, ಸಮವಸ್ತ್ರ ಸಂಹಿತೆ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಇಲಾಖೆ ಮತ್ತು ಪಿಯು ಮಂಡಳಿಯ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ನಂತರ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ಈ ವಿಚಾರ ಪ್ರಸ್ತುತ ನ್ಯಾಯಾಲಯದಲ್ಲಿದ್ದು, ಅಡ್ವೊಕೇಟ್ ಜನರಲ್ ಅವರೊಂದಿಗೆ ಮುಖ್ಯಮಂತ್ರಿ ಚರ್ಚಿಸಿದ್ದಾರೆ. ಕಾನೂನು ತಜ್ಞರ ಸಲಹೆ ಪಡೆದು ಮುಂದುವರಿಯಬೇಕಿದ್ದು, ಸರ್ಕಾರದ ನಿಲುವನ್ನು ಕೋರ್ಟ್ಗೆ ಮನವರಿಕೆ ಮಾಡಿಕೊಡಲು ಅಡ್ವೊಕೇಟ್ ಜನರಲ್ಗೆ ಸೂಚಿಸಿದ್ದಾರೆ.
ಹೈಕೋರ್ಟ್ ತೀರ್ಪು ಬರುವವರೆಗೆ ಸಮವಸ್ತ್ರ ಸಂಹಿತೆ ಪಾಲಿಸಬೇಕು ಎನ್ನುವುದನ್ನು ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸುತ್ತೇವೆ ಎಂದು ತಿಳಿಸಿದ್ದು, ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.