ಹೈದರಾಬಾದ್: ನಗರದ ಸಂಧ್ಯಾ ಚಿತ್ರಮಂದಿರದಲ್ಲಿ ಇತ್ತೀಚೆಗೆ ‘ಪುಷ್ಪ 2: ದಿ ರೈಸ್’ ಚಿತ್ರ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಜನವರಿ 3ಕ್ಕೆ ಮುಂದೂಡಿದೆ.
ಡಿಸೆಂಬರ್ 4 ರಂದು ಹೈದರಾಬಾದ್‌ನ ಪ್ರಸಿದ್ಧ ಸಂಧ್ಯಾ ಚಿತ್ರಮಂದಿರದಲ್ಲಿ ಚಿತ್ರ ಪ್ರದರ್ಶನದ ವೇಳೆ ನಟ ಅಲ್ಲು ಅರ್ಜುನ್ ಭೇಟಿ ನೀಡಿದ್ದರು. ಈ ವೇಳೆ ಅಭಿಮಾನಿಗಳು ಅವರನ್ನು ನೋಡಲು ಮುಗಿಬಿದ್ದ ಹಿನ್ನಲೆ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಗಿದ್ದು, ಈ ವೇಳೆ 35 ವರ್ಷದ ಮಹಿಳೆ ಸಾವನ್ನಪ್ಪಿದ್ದು ಮತ್ತು ಅವರ ಮಗ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆಯ ನಂತರ, ಪೊಲೀಸರು ನಟ, ಅವರ ಭದ್ರತಾ ತಂಡ ಮತ್ತು ಚಿತ್ರಮಂದಿರದ ಆಡಳಿತ ಮಂಡಳಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ನ ವಿವಿಧ ವಿಭಾಗಗಳ ಅಡಿಯಲ್ಲಿ ಚಿಕ್ಕಡ್ಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಅಲ್ಲು ಅರ್ಜುನ್ ಅವರ ನಿಯಮಿತ ಜಾಮೀನು ಅರ್ಜಿಯನ್ನು ವಿರೋಧಿಸಿ ಚಿಕ್ಕಡಪಲ್ಲಿ ಪೊಲೀಸರು ಪ್ರತಿ ಅಫಿಡವಿಟ್ ಸಲ್ಲಿಸಿದರು. ಅರ್ಜುನ್ ಅವರ ಕಾನೂನು ತಂಡವು ನಟನಿಗೆ ನಿಯಮಿತ ಜಾಮೀನು ಕೋರಿ ನ್ಯಾಯಾಲಯದಲ್ಲಿ ತಮ್ಮ ವಾದಗಳನ್ನು ಮಂಡಿಸಿತ್ತು. ಇದೀಗ ವಿಚಾರಣೆ ಮುಂದೂಡಿ ನ್ಯಾಯಾಲಯ ಆದೇಶಿಸಿದೆ.




