ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 16ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಕಳೆದ 10 ದಿನದಿಂದ ಮುಂಗಾರು ಮಳೆ ಸ್ವಲ್ಪ ಕಡಿಮೆಯಾಗಿತ್ತು. ಆದರೆ ಇದೀಗ ಮುಂಗಾರು ಮಳೆಯ ಅಬ್ಬರ ಹೆಚ್ಚಾಗುತ್ತಿರುವುದರಿಂದ ಕೃಷಿ ಚಟುವಟಿಕೆಯೂ ಚುರುಕುಗೊಂಡಿದ್ದು, ಮುಂಗಾರು ಪ್ರವೇಶದಿಂದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಲಕ್ಷಣಗಳು ಕಂಡುಬಂದಿವೆ.
ಹೌದು, ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎನ್ನಲಾಗಿದೆ.