ನವದೆಹಲಿ: ರಾಜ್ಯದಲ್ಲಿ ಉದ್ದು ಮತ್ತು ಸೋಯಾಬಿನ್ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಗ್ರಾಹಕರ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಹೆಸರು, ಸೂರ್ಯಕಾಂತಿ ಜತೆಗೆ ಈಗ ಉದ್ದು ಮತ್ತು ಸೋಯಾಬಿನ್ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶಿಸಿದೆ ಎಂದು ಹೇಳಿದ್ದಾರೆ.ನಾಲ್ಕೈದು ದಿನಗಳ ಹಿಂದಷ್ಟೇ ಹೆಸರು ಮತ್ತು ಸೂರ್ಯಕಾಂತಿ ಬೆಳೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮತಿ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಉದ್ದು ಮತ್ತು ಸೋಯಾಬಿನ್ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮೋದನೆ ನೀಡಿದೆ. ಈ ಮೂಲಕ ರಾಜ್ಯದ ರೈತರಿಗೊಂದು ಸಿಹಿ ಸುದ್ದಿ ಕೊಟ್ಟಿದೆ.
ಹೆಸರು ಮತ್ತು ಸೂರ್ಯಕಾಂತಿಗೆ ಬೆಂಬಲ ಬೆಲೆ ಘೋಷಿಸಿ ರಾಜ್ಯದಲ್ಲಿ ಖರೀದಿ ಕೇಂದ್ರ ತೆರೆಯುತ್ತಿದ್ದಂತೆಯೇ ಕೇಂದ್ರ ಕೃಷಿ ಸಚಿವಾಲಯ ಇದೀಗ ಉದ್ದು ಮತ್ತು ಸೋಯಾಬೀನ್ ಗೂ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.
ಕರ್ನಾಟಕದಲ್ಲಿ 2024-25 ರ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ 19,760 ಮೆಟ್ರಿಕ್ ಟನ್ ಉದ್ದು ಹಾಗೂ 1,03,315 ಮೆಟ್ರಿಕ್ ಟನ್ ಸೋಯಾಬಿನ್ ಖರೀದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ.
ಮುಕ್ತ ಮಾರುಕಟ್ಟೆಯಲ್ಲಿ ಈ ಬೆಳೆಗಳಿಗೆ ಬೆಲೆ ಕಡಿಮೆ ಇರುವುದರಿಂದ ಎಂಎಸ್‌ಪಿ ಅಡಿಯಲ್ಲಿ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.