ಬೆಂಗಳೂರು: ರಾಜ್ಯದ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೋಮವಾರ ಆಯೋಜಿಸಿದ್ದ ಗ್ರಂಥಾಲಯ ಮೇಲ್ವಿಚಾರಕರ ರಾಜ್ಯ ಸಮ್ಮೇಳನ ಉದ್ಘಾಟಿಸಿ ಹಾಗೂ 6,599 ಹೊಸ ಗ್ರಾಮ ಗ್ರಂಥಾಲಯ– ‘ಅರಿವು ಕೇಂದ್ರ’ಗಳಿಗೆ ಸಾಂಕೇತಿಕವಾಗಿ ಚಾಲನೆ ನೀಡಿ ಮುಖ್ಯಮಂತ್ರಿಗಳು ಮಾತನಾಡಿದರು.
ಪುಸ್ತಕಗಳು ಒಳ್ಳೆಯ ಸ್ನೇಹಿತನಿದ್ದಂತೆ. ಗ್ರಂಥಾಲಯಗಳಿಗೆ ಹೋಗುವುದು ಅತ್ಯಂತ ಉತ್ತಮ ಹವ್ಯಾಸ. ಗ್ರಾಮಗಳಲ್ಲಿ 6,599 ಗ್ರಾಮಮಟ್ಟದ ಗ್ರಂಥಾಲಯಗಳನ್ಮು ತೆರೆಯುವ ನಿರ್ಧಾರ ಮಾಡಿ ಘೋಷಣೆ ಮಾಡಿದ್ದೇವೆ. ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಘೋಷಿಸಿದರು.
ಜ್ಞಾನ ವಿಕಾಸ ಕೇವಲ ಶಾಲಾ ಶಿಕ್ಷಣದಿಂದ ಮಾತ್ರ ಸಾಧ್ಯವಿಲ್ಲ. ಶಾಲೆಗಳ ಹೊರಗೂ ಕಲಿಕೆ ಅಗತ್ಯ. ಸಾವಿರಾರು ವರ್ಷಗಳ ಕಾಲ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಸಮುದಾಯಗಳಿಗೆ ಅಂಬೇಡ್ಕರ್ ಅವರ ಸಂವಿಧಾನದ ಕಾರಣದಿಂದ ಶಿಕ್ಷಣ ಪಡೆಯುವ ಅವಕಾಶ ಸಿಕ್ಕಿದೆ. ನಾವು 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ನೂರಕ್ಕೆ ನೂರು ಸಾಕ್ಷರತೆ ಸಾಧ್ಯವಾಗಿಲ್ಲ. ಇದನ್ನು ಸಾಧಿಸುವ ದಿಕ್ಕಿನಲ್ಲಿ ನಾವು ಶ್ರಮಿಸಬೇಕಿದೆ ಎಂದು ಹೇಳಿದರು.