ಬೆಂಗಳೂರು: ವಿಧಾನ ಮಂಡಲದ ಉಭಯ ಸದನಗಳ ಕಲಾಪ (Assembly Session) ಸೋಮವಾರ (ಜುಲೈ 15) ಆರಂಭವಾಗಲಿದ್ದು, ಒಂಬತ್ತು ದಿನ ನಡೆಯಲಿದೆ. ಆಡಳಿತ ಪಕ್ಷದ ವಿರುದ್ಧ ಸಮರ ಸಾರಲು ಪ್ರತಿಪಕ್ಷಗಳು ಸಜ್ಜಾಗಿವೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಮುಡಾ ಹಗರಣ (MUDA Scam), ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ (Valmiki Corporation Scam), ಬೆಲೆ ಏರಿಕೆ (Price Hike) ಸೇರಿದಂತೆ ವಿವಿಧ ವಿಚಾರಗಳನ್ನು ಪ್ರಸ್ತಾವಿಸಿ ಸರ್ಕಾರದ ವಿರುದ್ಧ ಮುಗಿಬೀಳಲಿದೆ. ಸಿದ್ದರಾಮಯ್ಯ (CM Siddaramaiah) ಸರ್ಕಾರ ಕೂಡ ನಿನ್ನೆ ಅಧಿಕಾರಿಗಳ ಸಭೆ ನಡೆಸಿ ಪ್ರತ್ಯುತ್ತರ ನೀಡಲು ಸೂಕ್ತ ಸಿದ್ಧತೆ ಮಾಡಿಕೊಂಡಿದೆ.
ಅಧಿವೇಶನಕ್ಕೆ ಪೂರ್ವಭಾವಿಯಾಗಿ ನಿನ್ನೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ವಿಧಾನ ಮಂಡಲ ಅಧಿವೇಶನ ಚರ್ಚೆಗೆ ಸಮರ್ಪಕ ಉತ್ತರ ನೀಡಲು ಅಧಿಕಾರಿಗಳಿಗೆ ಸೂಚಿಸಿದರು. ಅಧಿವೇಶನದಲ್ಲಿ ಚರ್ಚೆಯಾಗುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಸಿದ್ಧರಾಗಿರುವಂತೆ, ಅಧಿವೇಶನದಲ್ಲಿ ಖುದ್ದು ಹಾಜರಿದ್ದು ಸಚಿವರಿಗೆ ತಮ್ಮ ಇಲಾಖೆಗಳ ವಿಷಯಗಳ ಕುರಿತ ಮಾಹಿತಿ ಒದಗಿಸಬೇಕು ಎಂದು ಸಿಎಂ ನಿರ್ದೇಶನ ನೀಡಿದರು.
ಸಿಎಂ ನಿನ್ನೆ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ವಿವಿಧ ಇಲಾಖೆಗಳಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇರುವ ವಿಷಯಗಳ ಕುರಿತು ಇಲಾಖಾ ಕಾರ್ಯದರ್ಶಿಗಳಿಂದ ಮುಖ್ಯಮಂತ್ರಿಗಳು ಸವಿಸ್ತಾರವಾಗಿ ಸಿಎಂ ಮಾಹಿತಿ ಪಡೆದರು. ಚರ್ಚೆಯ ಸಾಧ್ಯತೆ ಇರುವ ವಿಷಯಗಳ ಕುರಿತು ದತ್ತಾಂಶಗಳನ್ನು ಸಂಗ್ರಹಿಸಲು ಸಹ ಸೂಚನೆ ನೀಡಿದರು. ಎಲ್ಲ ಕಾರ್ಯದರ್ಶಿಗಳೂ, ಇಲಾಖಾ ಮುಖ್ಯಸ್ಥರು ಅಧಿವೇಶನದಲ್ಲಿ ಹಾಜರಿರಬೇಕು, ಸಚಿವರಿಗೆ ಸಮರ್ಪಕವಾಗಿ ಮಾಹಿತಿ ನೀಡಬೇಕು. ಆಯಾ ಇಲಾಖಾ ಸಚಿವರು ಚರ್ಚೆಯ ವಿಷಯಗಳಿಗೆ ಉತ್ತರಿಸಬೇಕು, ಅಗತ್ಯವಿದ್ದರೆ ನಾನು ಮಧ್ಯಪ್ರವೇಶಿಸುತ್ತೇನೆ ಎಂದು ತಿಳಿಸಿದರು. ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.