ಬೆಂಗಳೂರು: ಮುಂದಿನ 2 ತಿಂಗಳ ಒಳಗಡೆ ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಮರು ಪರೀಕ್ಷೆಯ ನಿರ್ಧಾರವನ್ನು ಪ್ರಕಟಿಸಿದ್ದು, ಕನ್ನಡ ಭಾಷಾಂತರದಲ್ಲಿ ಹಲವು ಲೋಪಗಳು ಕಂಡು ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮರು ಪರೀಕ್ಷೆ ನಡೆಸಬೇಕೆಂದು ಕೋರಿ ಆಗ್ರಹಿಸಿ ಪ್ರತಿಭಟಿಸಿದ್ದರು.
ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ.
ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.