ಬೆಂಗಳೂರು: ಸಿದ್ದರಾಮಯ್ಯನವರ ಸಮಾಜವಾದದ ಮುಖವಾಡ ಕಳಚಿ ಬಿದ್ದಿದೆ. ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಹಕ್ಕೊತ್ತಾಯವನ್ನು ಮುಂದಿಟ್ಟರು.
ಮೈಸೂರು ಮುಡಾದಲ್ಲಿ ನಡೆದ ಹಗರಣದಲ್ಲಿ ಭಾಗವಹಿಸಿದ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ ನಗರದ ಶಾಸಕರ ಭವನದ ಗಾಂಧಿ ಪ್ರತಿಮೆ ಬಳಿ ಇಂದು ನಡೆದ ಬಿಜೆಪಿ- ಜೆಡಿಎಸ್ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಭ್ರಷ್ಟ ಕಾಂಗ್ರೆಸ್, ಭ್ರಷ್ಟ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ- ಜೆಡಿಎಸ್ ನಿರಂತರ ಹೋರಾಟ ನಡೆಸುತ್ತಿವೆ. ಈ ಹೋರಾಟ ಇದೀಗ ತಾರ್ಕಿಕ ಅಂತ್ಯಕ್ಕೆ ಬಂದಿದೆ. ಮೈಸೂರಿನ ಮೂಡ ಹಗರಣ, ವಾಲ್ಮೀಕಿ ನಿಗಮದ ಹಗರಣಗಳು ಇದರಲ್ಲಿ ಪ್ರಮುಖವಾಗಿವೆ. ಮೂಡದಡಿ 4ರಿಂದ 5 ಸಾವಿರ ಕೋಟಿಯ ನಿವೇಶನಗಳನ್ನು ನುಂಗಿ ಹಾಕಿದ್ದಾರೆ. ಇದನ್ನು ಖಂಡಿಸಿ, ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸುತ್ತಿದ್ದೇವೆ ಎಂದರು.
ಭಂಡತನ ಬಿಟ್ಟು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಿತ್ತು. ಆದರೆ, ಸಿದ್ದರಾಮಯ್ಯನವರು ಗೂಂಡಾಗಿರಿಗೆ ಇಳಿದಿದ್ದಾರೆ. ರಾಜ್ಯಪಾಲರ ಮೇಲೆ ಆರೋಪ ಮಾಡುವುದನ್ನು ಬಿಟ್ಟು, ಕೂಡಲೇ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕಿದೆ ಎಂದು ಆಗ್ರಹಿಸಿದರು.
ಭ್ರಷ್ಟರಿಂದ, ಭ್ರಷ್ಟರಿಗಾಗಿ, ಭ್ರಷ್ಟರಿಗೋಸ್ಕರ ಕಾಂಗ್ರೆಸ್ ಸರಕಾರ ಇದೆ. ಹೈಕಮಾಂಡ್ ಕಾಪಾಡುವ, ಸಚಿವರು, ಶಾಸಕರು ಬೆನ್ನಿಗೆ ನಿಲ್ಲುವ ಭ್ರಮೆಯಿಂದ ಹೊರಕ್ಕೆ ಬನ್ನಿ. ಕಾನೂನನ್ನು ಎದುರಿಸಿ. ಪುಂಡಾಟಿಕೆ ಒಪ್ಪಲಾಗದು. ತಪ್ಪನ್ನು ಒಪ್ಪಿಕೊಂಡು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕಾನೂನು ಕ್ರಮ ಎದುರಿಸಿ ಎಂದು ಒತ್ತಾಯಿಸಿದರು.