ಕೊಪ್ಪಳ: ಇತ್ತೀಚೆಗೆ ಮೈಸೂರು, ಚಾಮರಾಜನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಯತ್ನಾಳ್, ಸಿ.ಟಿ. ರವಿ, ಸೂಲಿಬೆಲೆ ವಿರುದ್ಧ ದೂರು ದಾಖಲಿಸಿದ್ದ ಕಾಂಗ್ರೆಸ್ ಕೊಪ್ಪಳದಲ್ಲಿ ಅದೇ ಕಾರಣಕ್ಕಾಗಿ ಪ್ರಕರಣ ದಾಖಲಿಸಿದೆ.
ಹೌದು, ವಿಜಯಪುರದ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವ ಸಿ.ಟಿ. ರವಿ ನಮೋ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ಮುಸ್ಲಿಮರನ್ನು ಟಾರ್ಗೆಟ್ ಮಾಡಿ ಮತ್ತು ಅವರ ಸಂಸ್ಥೆಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದಲ್ಲದೆ ಸಾರ್ವಜನಿಕರಿಗೆ ಗೊಂದಲ ಸೃಷ್ಟಿಸಿ ಕೋಮುಗಲಭೆಗೆ ಪ್ರಚೋದನೆ ನೀಡಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ವತಿಯಿಂದ ಕೊಪ್ಪಳ ಎಸ್ಪಿಗೆ ಬುಧವಾರ ದೂರು ಸಲ್ಲಿಸಲಾಯಿತು.
ಶಾಸಕ ಬಸನಗೌಡ ಪಾಟೀಲ ಯತ್ನಾಳ ಪದೇ ಪದೇ ಮುಸ್ಲಿಮರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಾ ಗೊಂದಲ ಸೃಷ್ಟಿ ಮಾಡುತ್ತಿದ್ದು, ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಅದೇ ರೀತಿ ಮಾಜಿ ಸಚಿವ ಸಿ.ಟಿ. ರವಿ ಮತ್ತು ಚಕ್ರವರ್ತಿ ಸೂಲಿಬೆಲೆ ಕೂಡ ವಕ್ಫ್ ಸಂಸ್ಥೆಗಳ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ. ರಾಜ್ಯದಲ್ಲಿ ನೆಮ್ಮದಿಯಿಂದ ಇರುವ ಅಮಾಯಕ ಜನರಲ್ಲಿ ಕೋಮು ದ್ವೇಷ ಮೂಡಿಸುವಂತಹ ಹುನ್ನಾರ ನಡೆಸಿದ್ದಾರೆ. ಇಂತಹ ಸಮಾಜ ವಿರೋಧಿ ಕೋಮುವಾದಿ ಮುಖಂಡರ ವಿರುದ್ಧ ಕ್ರಮ ಜರುಗಿಸಬೇಕು, ಅವರನ್ನು ಬಂಧಿಸಬೇಕು, ಅವರ ಮೇಲೆ ಪ್ರಕರಣ ದಾಖಲಿಸಬೇಕೆಂದು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.