ಬೆಂಗಳೂರು: ರಾಜ್ಯದಲ್ಲಿ ಉತ್ಪಾದನೆಯಾಗುವ ಔಷಧಗಳು ಸೇರಿದಂತೆ ಸರ್ಕಾರಿ ಔಷಧಾಲಯಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು. ಮಾರುಕಟ್ಟೆಗೆ ಪೂರೈಕೆಯಾಗುವ ಔಷಧಗಳ ಗುಣಮಟ್ಟದ ಮೇಲೆ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಸೂಚನೆ ನೀಡಿದರು.
ವಿಕಾಸಸೌಧದಲ್ಲಿ ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಔಷಧಿಗಳ ಗುಣಮಟ್ಟದ ಬಗ್ಗೆ ಕಟ್ಟುನಿಟ್ಟಿನ ತಪಾಸಣೆ ನಡೆಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ರಾಜ್ಯದ ಮಾರುಕಟ್ಟೆಯಲ್ಲಿ ಸಾಕಷ್ಟು ಕಳಪೆ ಗುಣಮಟ್ಟದ ಔಷಧಿಗಳು ಪೂರೈಕೆ ಆಗುತ್ತಿದೆ. ಯಾರ ಹಂಗು ಇಲ್ಲದೇ ಮನಬಂದಂತೆ ಔಷಧಿಗಳನ್ನು ಜನರ ಮನೆಗೆ ಪೂರೈಸುತ್ತಿದ್ದಾರೆ. ಇದರಿಂದ ಜನರ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರುತ್ತಿದೆ. ಔಷಧ ನಿಯಂತ್ರಣ ಇಲಾಖೆಯ ಮುಖ್ಯ ಉದ್ದೇಶವೇ ಸಾರ್ವಜನಿಕರ ಆರೋಗ್ಯದ ಮೇಲೆ ನಿಗಾ ಇರಿಸುವುದು. ಇದನ್ನು ದೃಷ್ಟಿಯಲ್ಲಿಟ್ಟುಕೊಂಡು ಔಷಧಿಗಳ ಗುಣಮಟ್ಟದ ಬಗ್ಗೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕು. ಆದರೆ, ಆ ರೀತಿಯ ಕಾರ್ಯವೈಖರಿ ಇಲಾಖೆಯ ಅಧಿಕಾರಿಗಳಿಂದ ಕಂಡುಬರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ನಿಟ್ಟಿನಲ್ಲಿ ಔಷಧಿಗಳ ಗುಣಮಟ್ಟದ ವಿಚಾರದಲ್ಲಿ ಯಾವ ಕ್ರಮಗಳನ್ನು ಕೈಗೊಳ್ಳುತ್ತಿದ್ದೀರಿ ಎಂಬುದರ ಬಗ್ಗೆ ವಿಸ್ತೃತ ವರದಿ ನೀಡಬೇಕು. ಎಷ್ಟು ಕಳಪೆ ಔಷಧಿಗಳ ತಯಾರಕರ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ. ಯಾವ ಔಷಧಿಗಳನ್ನು ಟೆಸ್ಟಿಂಗ್ ಒಳಪಡಿಸಲಾಗಿದೆ ಎಂದು ತಿಳಿಸಬೇಕು. ಕಳೆಪೆ ಗುಣಮಟ್ಟದ ಔಷಧಿಗಳು ಮಾರುಕಟ್ಟೆಯಲ್ಲಿ ಸಿಗದಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಸೂಚನೆ ನೀಡಿದರು.