ಬೆಂಗಳೂರು: ಮದ್ಯದ ಅಮಲಿನಲ್ಲಿ ಚಾಲಕನೊಬ್ಬ ಅತೀ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದು ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಆಕೆ ಮೃತಪಟ್ಟಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಸವೇಶ್ವರನಗರ ನಿವಾಸಿ ಸಂಧ್ಯಾ (30) ಮೃತ ದುರ್ದೈವಿ. ಶನಿವಾರ ಸಂಜೆ ಸುಮಾರು 7 ಗಂಟೆಗೆ ಬೆಂಗಳೂರು-ಮೈಸೂರು ರಸ್ತೆಯ ಕೆಂಗೇರಿ ಬಿಎಂಟಿಸಿ ಟಿಟಿಎಂಸಿ ಬಳಿ ಈ ದುರ್ಘಟನೆ ನಡೆದಿದೆ. ಘಟನೆ ಸಂಬಂಧ ಕಾರು ಚಾಲಕ ನಾಗರಭಾವಿ ನಿವಾಸಿ ಧನುಷ್ (20) ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖಾಸಗಿ ಕಂಪನಿ ಉದ್ಯೋಗಿ ಸಂಧ್ಯಾ ಶನಿವಾರ ಕೆಲಸ ಮುಗಿಸಿಕೊಂಡು ಮನೆಗೆ ತೆರಳಲು ಕೆಂಗೇರಿ ಬಿಎಂಟಿಸಿ ಟಿಟಿಎಂಸಿ ಬಳಿ ರಸ್ತೆ ದಾಟುತ್ತಿದ್ದರು. ಈ ವೇಳೆ ರಾಜರಾಜೇಶ್ವರಿನಗರದ ಕಡೆಯಿಂದ ವೇಗವಾಗಿ ಬಂದ ಕಾರು, ಏಕಾಏಕಿ ಸಂಧ್ಯಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯರ ರಭಸಕ್ಕೆ ಸಂಧ್ಯಾ ಅವರ ಎರಡು ಕಾಲುಗಳು ಮುರಿದು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ತಲೆ ಹಾಗೂ ದೇಹದ ಇತರೆ ಭಾಗಗಳಿಗೆ ಗಂಭೀರ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದ್ದ ಪರಿಣಾಮ ಚಿಕಿತ್ಸೆ ಫಲಿಸದೆ ಸಂಧ್ಯಾ ಮೃತಪಟ್ಟಿದ್ದಾರೆ.
ಕುಡಿದದ್ದು ಪರೀಕ್ಷೆಯಲ್ಲಿ ದೃಢ:
ವಿಷಯ ತಿಳಿದು ಸ್ಥಳಕ್ಕೆ ಬಂದ ಸಂಚಾರ ಪೊಲೀಸರು ಅಪಘಾತ ಎಸೆದ ಕಾರನ್ನು ಜಪ್ತಿ ಮಾಡಿ ಚಾಲಕ ಧನುಷ್‌ನನ್ನು ವಶಕ್ಕೆ ಪಡೆದಿದ್ದಾರೆ. ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮದ್ಯ ಸೇವಿಸಿರುವುದು ಖಚಿತವಾಗಿದೆ. ಈ ಸಂಬಂಧ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.