ಬೆಂಗಳೂರು: ರಾಜ್ಯಾದ್ಯಂತ ಭಾರೀ ಮಳೆಯೊಂದಿಗೆ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಕರ್ನಾಟಕ ಕರಾವಳಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯೊಂದಿಗೆ ಕೆಲವೊಮ್ಮೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.
ಉತ್ತರ ಒಳನಾಡಿನ ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾದರೆ, ಬೆಳಗಾವಿ, ಧಾರವಾಡ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ದಕ್ಷಿಣಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.