ಬೆಳಗಾವಿ: ನ.1 ರಂದು ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಖಡಕ್ ಆದೇಶ ನೀಡಿದ್ದಾರೆ.
ಬೆಳಗಾವಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸಭೆಯಲ್ಲಿ ಮಾತನಾಡಿದ ಅವರು, ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂಬ ಕನ್ನಡ ಪರ ಸಂಘಟನೆಗಳ ಒಕ್ಕೊರಲಿನ ಮನವಿಗೆ ಸ್ಪಂಧಿಸಿದ ಜಿಲ್ಲಾಧಿಕಾರಿಗಳು, ಈ ಬಾರಿ ಯಾವುದೇ ಕಾರಣಕ್ಕೂ ಕರಾಳ ದಿನಾಚರಣೆಗೆ ಅನುಮತಿ ನೀಡಲಾಗುವುದಿಲ್ಲ ಎಂದು ಸಭೆಗೆ ತಿಳಿಸಿದರು.
ನ.1 ರಂದು ದೀಪಾವಳಿ ಹಬ್ಬದ ದಿನವೇ ಕರ್ನಾಟಕ ರಾಜ್ಯೋತ್ಸವವನ್ನು ಬೆಳಗಾವಿಯಲ್ಲಿ ಅತೀ ವಿಜೃಂಭಣೆಯಿಂದ ಆಚರಿಸಲಾಗುವದು. ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕನ್ನಡ ನಾಡು ನುಡಿಗಾಗಿ ಶ್ರಮಿಸಿದ ಕನ್ನಡ ಹೋರಾಟಗಾರರಿಗೆ ಸನ್ಮಾನ ಮಾಡಲಾಗುವುದು. ಅಲ್ಲದೇ ಈ ಬಾರಿ ಕನ್ನಡ ಪರ ಹೋರಾಟಗಾರರು ಹಾಗೂ ಮಾಧ್ಯಮ ಪ್ರತಿನಿಧಿಗಳನ್ನು ಸನ್ಮಾನಿಸಲು ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗುವುದು. ಈ ಬಾರಿ ರಾಜ್ಯೋತ್ಸವ ಮೆರವಣಿಗೆಗೆ ಆಗಮಿಸುವ ಮಹಿಳೆಯರಿಗಾಗಿ ಪ್ರತ್ಯೇಕ ಗ್ಯಾಲರಿ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.