ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಮತ್ತು ಎನ್‌ಡಿಎ ನಡುವೆ ಜಿದ್ದಾಜಿದ್ದಿನ ಕಣವಾಗಿರುವ ಮೂರು ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಶುಕ್ರವಾರ ಕಡೆಯ ದಿನವಾಗಿದೆ.
ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಇದೇ ತಿಂಗಳು 18ರಂದು ಅಧಿಸೂಚನೆ ಪ್ರಕಟಿಸಲಾಗಿತ್ತು. ಶುಕ್ರವಾರ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಇದೇ 28ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. 30ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ನ.13ರಂದು ಮತದಾನ ನಡೆಯಲಿದ್ದು, ನ.23ರಂದು ಮತ ಎಣಿಕೆ ಜರುಗಲಿದೆ.
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ಚನ್ನಪಟ್ಟಣ, ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ಶಿಗ್ಗಾಂವಿ ಮತ್ತು ಇ.ತುಕಾರಾಂ ರಾಜೀನಾಮೆಯಿಂದ ಸಂಡೂರು ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಉಪಚುನಾವಣೆ ಜರುಗಲಿದೆ.
ಈ ನಡುವೆ ಕಾಂಗ್ರೆಸ್ ಮತ್ತು ಎನ್‌ಡಿಎ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ. ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್, ಶಿಗ್ಗಾಂವಿ ಕ್ಷೇತ್ರದಿಂದ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಇನ್ನುಳಿದ ಅಭ್ಯರ್ಥಿಗಳು ಶುಕ್ರವಾರ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಲಿದ್ದಾರೆ.