ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನ ಹೆಚ್ಚಿನ ಮಳೆಯಾಗುವ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ.
ಹೌದು, ನ.1ರಂದು ದಕ್ಷಿಣ ಒಳನಾಡಿನ ರಾಮನಗರ, ಚಾಮರಾಜನಗರ ಮಲೆನಾಡು ಭಾಗದ ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ 6 ರಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ. ನ.2ಕ್ಕೆ ಚಾಮರಾಜನಗರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ನ.3ಕ್ಕೆ ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ. ಉಳಿದಂತೆ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ನ.5ರ ನಂತರ ಮಳೆ ರಾಜ್ಯಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಿಂಗಾರು ಮಳೆ ಅವಧಿಯ ಮೊದಲು ತಿಂಗಳು ಅಕ್ಟೋಬರ್ ಮುಕ್ತಾಯಗೊಂಡಿದ್ದು, ವಾಡಿಕೆ ಪ್ರಮಾಣಕ್ಕಿಂತ ಶೇ.46 ರಷ್ಟು ರಾಜ್ಯದಲ್ಲಿ ಹೆಚ್ಚಿನ ಮಳೆಯಾಗಿದೆ. 128 ಮಿ.ಮೀ ಅಕ್ಟೋಬರ್‌ನ ವಾಡಿಕೆ ಮಳೆಯಾಗಿದೆ. ಈ ವಾಡಿಕೆ 183.ಮೀ ಮಳೆಯಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಶೇ.21 ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಶೇ.19 ರಷ್ಟು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವಾಡಿಕೆ ಪ್ರಮಾಣಕ್ಕಿಂತ ಶೇ. 64 ರಷ್ಟು ಹೆಚ್ಚಿನ ಮಳೆಯಾಗಿದೆ.