ಹೊನ್ನಾವರ: ಪ್ರವಾಸಕ್ಕೆ ಆಗಮಿಸಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಹೊನ್ನಾವರ-ಬೆಂಗಳೂರು ಹೆದ್ದಾರಿಯ ಮುಗ್ವಾ ಕ್ರಾಸ್ ಬಳಿ ನಡೆದಿದೆ. ಪರಿಣಾಮ 20 ಪ್ರವಾಸಿಗರು ಗಾಯಗೊಂಡಿದ್ದಾರೆ.
ಪ್ರವಾಸಿಗರ ಬಸ್ಸು ಬೆಂಗಳೂರಿನಿಂದ ಗೋಕರ್ಣಕ್ಕೆ ಆಗಮಿಸುತ್ತಿದ್ದು, ಮುಗ್ವಾ ಕ್ರಾಸ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬಲಕ್ಕೆ ಹೋಗಿ ಪಲ್ಟಿಯಾಗಿದೆ. ಬಸ್‌ನಲ್ಲಿ ಕುಟುಂಬಸ್ಥರು, ಸ್ನೇಹಿತರು ಸೇರಿ ಪ್ರವಾಸಕ್ಕೆ ಬಂದಿದ್ದು, ಗಾಯಗೊಂಡ 20 ಮಂದಿ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳನ್ನು ಹೊನ್ನಾವರ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಗಾಯಗೊಂಡವರನ್ನು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.