ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಿನ್ನೆ (ಸೆ.14) ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ವಿಚಾರವಾಗಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಕರ್ನಾಟಕದ ಬೆಟ್ಟ ಕುರುಬ ಸಮುದಾಯ ಸೇರಿದಂತೆ ಒಟ್ಟು 12 ಜಾತಿಗಳನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರ್ಪಡೆಗೊಳಿಸಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ.
ಈ ಕುರಿತಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕದ ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳ ಅಂಚಿನಲ್ಲಿ ಬೆಟ್ಟ ಕುರುಬ ಜನಾಂಗ ನೆಲೆಸಿತ್ತು. ಕಾರಣಾಂತರಗಳಿಂದ ಈ ಜನಾಂಗದವರನ್ನು ಒಕ್ಕಲೆಬ್ಬಿಸಲಾಗಿತ್ತು. ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಗೊಳಿಸುವಂತೆ ಈ ಜನಾಂಗದವರು ಕಳೆದ 30 ವರ್ಷಗಳಿಂದ ಹೋರಾಡುತ್ತಿದ್ದರು.
ಇನ್ನು, ಬೆಟ್ಟ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿಪಕ್ಷ ನಾಯಕ ಸಿದ್ಧರಾಮಯ್ಯ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸ್ವಾಗತಿಸಿದ್ದಾರೆ.




