ಉಡುಪಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಿಂದ ಭಾರೀ ಪ್ರಮಾಣದ ಹಾನಿ ಉಂಟಾಗಿದ್ದು, ರಾಜ್ಯದಲ್ಲಿ ಮಳೆಗೆ 32 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ, ತುರ್ತು ಪರಿಹಾರ ಪರಿಹಾರವಾಗಿ 500 ಕೋಟಿ ರೂ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ಮಳೆ ಹಾನಿ ಬಗ್ಗೆ ಎಲ್ಲಾ ಜಿಲ್ಲೆಗಳಿಂದ ವರದಿ ತರಿಸಿಕೊಂಡು ಒಂದು ತಿಂಗಳಲ್ಲಿ ಪೂರ್ಣ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಮಳೆಯಿಂದ ಇದುವರೆಗೆ ಐವರು ನಾಪತ್ತೆಯಾಗಿದ್ದು, 34 ಮಂದಿ ಗಾಯಗೊಂಡಿದ್ದಾರೆ ಎಂದು ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಉಡುಪಿ ಜಿಪಂ ಕಚೇರಿಯಲ್ಲಿ ಬುಧವಾರ ಉತ್ತರಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಅವಲೋಕನ ಸಭೆ ನಡೆಸಿದ ಬಳಿಕ ಸಿಎಂ ಈ ಘೋಷಣೆ ಮಾಡಿದ್ದಾರೆ. ಕಳೆದ ಎರಡು ದಿನಗಳಿಂದ ಸಿಎಂ ಮಳೆ ಹಾನಿಗೆ ಒಳಗಾಗಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ.




