ಬೆಂಗಳೂರು: ಕರಾವಳಿಯಲ್ಲಿನ ಸರಣಿ ಹತ್ಯೆ (10 ದಿನದಲ್ಲಿ 3 ಕೊಲೆ)ಗೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.
ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದು, ‘ಸರ್ಕಾರ ಮೂರು ಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದೆ. ಫಾಜಿಲ್ ಹತ್ಯೆ ಕುರಿತು ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ಈ ಹತ್ಯೆಗಳಿಗೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸುತ್ತೇನೆ’ ಎಂದು ತಿಳಿಸಿದ್ದಾರೆ.
‘ಸಿದ್ದರಾಮಯ್ಯ ಹೇಳಿಕೆ ವೇದವಾಕ್ಯವಲ್ಲ’
ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳಿಗೆ ಬೊಮ್ಮಾಯಿಯವರೇ ನೇರ ಹೊಣೆ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ CM ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ಹೇಳಿದ್ದೆಲ್ಲಾ ವೇದವಾಕ್ಯವಲ್ಲ. ಸರ್ಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡುತ್ತಿದೆ. ಕೇರಳ ಗಡಿ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಕಠಿಣ ಕಾನೂನು ಸುವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುವುದು. ದುರ್ಬಲ CM ಅನ್ನುವ ಟೀಕೆಗೆ ಉತ್ತರಿಸಿದ CM, ವಿಪಕ್ಷ ನಾಯಕನಿಗೆ ಟೀಕೆ ಮಾಡುವುದೇ ಕೆಲಸ ಎಂದು ಹೇಳಿದ್ದಾರೆ.