ಬೆಂಗಳೂರು: ರಾಜಧಾನಿಯಲ್ಲಿ ನಿರ್ಮಿಸಿರುವ ಅಪಾಯಕಾರಿ, ಶಿಥಿಲಗೊಂಡ ಹಾಗೂ ಅನಧಿಕೃತ ಕಟ್ಟಡ ತೆರವಿಗೆ ಕಾನೂನು ತಿದ್ದುಪಡಿ ಅಥವಾ ಸುಗ್ರೀವಾಜ್ಞೆ ಮೂಲಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಮಳೆ ಅವಾಂತರ ಕುರಿತು ಗುರುವಾರ ಅಧಿಕಾರಿಗಳೊಂದಿಗೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ತುರ್ತು ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಅಗತ್ಯ ಕ್ರಮ ಕೈಗೊಳ್ಳುವ ಸಂಪೂರ್ಣ ಅಧಿಕಾರವಿದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಯಾವುದೇ ಆಸ್ತಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದು. ಬಿಎಂಟಿಎಫ್, ಬಿಡಿಎ, ಬಿಬಿಎಂಪಿ, ಬಿಎಂಆರ್‌ಡಿಎ ಕೆಲವು ತಿದ್ದುಪಡಿ ತಂದು ಅವರಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದರು.
ಈ ಹಿಂದೆ ನೀಡಲಾದ ಅಧಿಕಾರವನ್ನು 2020-21ರಲ್ಲಿ ಹಿಂಪಡೆಯಲಾಗಿದ್ದು, ಅದನ್ನು ಈಗ ಮತ್ತೆ ನೀಡಲಾಗುತ್ತಿದೆ. ನಗರದ ಕಂದಾಯ ಬಡಾವಣೆ ಅಥವಾ ಬೇರೆ ಬಡಾವಣೆಯಲ್ಲಿ ಅಕ್ರಮ ಕಟ್ಟಡ ನಿರ್ಮಾಣ, ಒತ್ತುವರಿ ನಿಲ್ಲಿಸಲು ಸುಗ್ರೀವಾಜ್ಞೆ ತರಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ನಂಜಪ್ಪ ಗಾರ್ಡನ್‌ನಲ್ಲಿ 10/25 ಅಡಿ ನಿವೇಶನದಲ್ಲಿ ಐದು ಮಹಡಿ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ತೆರವುಗೊಳಿಸುವುದಕ್ಕೆ ಸೂಚಿಸಲಾಗಿದೆ. ಜತೆಗೆ, ಪ್ರತಿ ವಲಯದಲ್ಲಿ ಅಕ್ರಮ, ಕಳಪೆ ಗುಣಮಟ್ಟದ ಕಾಮಗಾರಿ ಹಾಗೂ ಜೀವಕ್ಕೆ ಅಪಾಯ ತರಬಹುದಾದ ಕಟ್ಟಡಗಳ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶಿಸಿದ್ದೇನೆ ಎಂದರು.ಸಭೆಯಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇದ್ದರು.
ಸೋಮವಾರ ಕಟ್ಟಡ ಸರ್ವೇ:
ನಿರ್ಮಾಣ ಹಂತದ ಕಟ್ಟಡಗಳ ಬಗ್ಗೆ ಸೋಮವಾರದಿಂದ ಸಮೀಕ್ಷೆ ನಡೆಸಲಾಗುವುದು. ಖಾಸಗಿ ಹಾಗೂ ಪಾಲಿಕೆಯಿಂದ ಈ ಸಮೀಕ್ಷೆ ನಡೆಸಲಾಗುವುದು. ಯಾವುದಾದರೂ ಕಟ್ಟಡ ಕಾನೂನುಬಾಹಿರವಾಗಿ ನಿರ್ಮಾಣವಾಗುತ್ತಿದೆಯೇ ಎಂದು ಪತ್ತೆ ಮಾಡಿ ನಿರ್ಮಾಣ ತಡೆಗಟ್ಟಲಾಗುವುದು. ಪ್ರತಿ ಕಟ್ಟಡದ ಫೋಟೋ ಹಾಗೂ ವಿಡಿಯೋಗಳನ್ನು ಸಂಗ್ರಹಿಸಲಾಗುವುದು. ಜಂಟಿ ಆಯುಕ್ತರ ನೇತೃತ್ವದಲ್ಲಿ ಡ್ರೋನ್ ಮೂಲಕ ಇದರ ಮೇಲ್ವಿಚಾರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.