ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದೆ. ರೈತ ವಿರೋಧಿ ಕಾಯ್ದೆ ಜಾರಿಗೆ ನಾವು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿ ಇಂದು ಸಾವಿರಾರು ರೈತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ನಗರದಲ್ಲಿ ಸುಮಾರು ಒಂದೂವರೆ ಕಿ.ಮೀಟರ್ ಟ್ರಾಫಿಕ್ ಜಾಮ್ ಉಂಟಾಗಿದೆ.
ವಿದ್ಯುತ್, ಎಪಿಎಂಸಿ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರು ಬೀದಿಗಿಳಿದಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಹಳೆ ಮೊಳಗಿಸಿದ್ದಾರೆ. ಇಂದು ಅಧಿವೇಶನದ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿರುವ ರೈತರು ಸದನದಲ್ಲಿ ಮೂರು ಕಾಯ್ದೆಗಳನ್ನ ಕೈ ಬಿಡುವಂತೆ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಕಿಡಿ
ಮೂರು ಕಾಯ್ದೆ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಸರಿಸುತ್ತಿರುವ ಧೋರಣೆ ಕುರಿತು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಸಿರು ಶಾಲು ಹಾಕಿಕೊಳ್ಳುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದಲ್ಲಿ ರೈತರ ಕೊಲೆ ನಡೆಯುತ್ತಿದ್ದರೂ ಲೆಕ್ಕಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತ, ದಲಿತ, ಕಾರ್ಮಿಕ ಸಂಘಟನೆಯ 30ಕ್ಕೂ ಹೆಚ್ಚು ಸಂಘಟನೆಗಳು ದೊಡ್ಡ ರ‌್ಯಾಲಿ ಆರಂಭಿಸಿದ್ದು, ಕೆಲವೊತ್ತು ಸಂಚಾರ ಸಮಸ್ಯೆ ಸೃಷ್ಟಿಯಾಯಿತು. ದಾರಿಯುದ್ದಕ್ಕೂ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ , ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಇತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.