ಮುಂಬೈ: ಮುಂಬೈನ ತಾಡದೇವ್ ಪ್ರದೇಶದಲ್ಲಿ 20 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸದ್ದು, ಇಬ್ಬರು ಸಾವನ್ನಪ್ಪಿದ್ದು, ಹದಿನೈದು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ನಗರದ ಭಾಟಿಯಾ ಆಸ್ಪತ್ರೆಯ ಬಳಿಯ 20 ಅಂತಸ್ತಿನ ಕಮಲಾ ಕಟ್ಟಡದಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಉಂಟಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಗೊಂಡವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು, ಬೆಂಕಿ ನಿಯಂತ್ರಿಸಲು 13 ಅಗ್ನಿಶಾಮಕ ವಾಹನಗಳು ಮತ್ತು ಏಳು ಜಂಬೋ ಟ್ಯಾಂಕರ್‌ಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಗೆ ಐದು ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ ಎಂದು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ತಿಳಿಸಿದೆ. 20 ಅಂತಸ್ತಿನ ಕಟ್ಟಡದಲ್ಲಿ 18ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನಾಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.