ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ನಾನು ಮಂತ್ರಿಯಾಗುವುದಿಲ್ಲ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ಸಂಬಂಧಿಸಿದಂತೆ, ಸಚಿವ ಕೆ ಎಸ್ ಈಶ್ವರಪ್ಪ ಅವರು ಯತ್ನಾಳ್ ಅವರನ್ನು ಮಂತ್ರಿ ಮಾಡುವುದು ಬಿಡುವುದು ಸಿಎಂ ಅವರಿಗೆ ಬಿಟ್ಟ ವಿಚಾರ ಎಂದು ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕೆ ಎಸ್ ಈಶ್ವರಪ್ಪ ಅವರು,ಯತ್ನಾಳ್ ಅವರು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಒಂದು ವೇಳೆ ಸಿಎಂ ಯಡಿಯೂರಪ್ಪ ಮತ್ತು ಕೇಂದ್ರದ ನಾಯಕರು ಯತ್ನಾಳ್ ಅವರಿಗೆ ಸಚಿವರಾಗಲು ಸೂಚಿಸಿದರೆ ಅವರು ಅದನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ. ಯತ್ನಾಳ್ ಅವರು ಕೆಲವು ಬಾರಿ ಏನೇನೋ ಹೇಳಿಕೆಗಳನ್ನು ನೀಡುತ್ತಾರೆ. ಇದು ತಪ್ಪು ಎಂದು ನಾವು ಹೇಳಿದ್ದೇವೆ. ಆದರೆ ಅವರನ್ನು ಸಚಿವರಾಗಿ ಮಾಡಬೇಕು ಎಂದು ನಿರ್ಧರಿಸಿದರೆ ಅದನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದು, ಯತ್ನಾಳ್ ಅವರನ್ನು ಮಂತ್ರಿ ಮಾಡ್ತಾರೋ? ಇಲ್ಲವೋ? ನನಗೆ ಗೊತ್ತಿಲ್ಲ ಎಂದು ಮೈಸೂರಿನಲ್ಲಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಹೇಳಿದ್ದಾರೆ.
ಇನ್ನು ಸಚಿವ ಕೆ ಎಸ್ ಈಶ್ವರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನೆಡೆಸಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಎಂದು ಸಿದ್ದರಾಮಯ್ಯ ಅವರು ಸುಮ್ಮನೆ ಮಾತನಾಡುತ್ತಾರೆ. ಇದನ್ನು ಕೇಂದ್ರದ ನಾಯಕರು, ಶಾಸಕರು ಯಾರು ಹೇಳಿಲ್ಲ, ಸಿದ್ದರಾಮಯ್ಯ ಅವರು ಒಬ್ಬರೇ ಇದನ್ನು ಹೇಳುತ್ತಿರುವುದು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಅವರ ಕಣ್ಣು ಆ ಸ್ಥಾನದ ಮೇಲೆ ಬಿದ್ದಿದೆ. ಹೀಗಾಗಿ ಅವರು ಈ ರೀತಿ ಮಾತನಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಸಚಿವ ಕೆ ಎಸ್ ಈಶ್ವರಪ್ಪ ಅವರು ಹೇಳಿದ್ದಾರೆ.