ಗ್ರಾಮೀಣ ಅಭಿವೃದ್ಧಿಯಲ್ಲಿ ದೇಶದಲ್ಲಿಯೇ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ : ಸಚಿವ ಕೆ ಎಸ್ ಈಶ್ವರಪ್ಪ

ದಾವಣಗೆರೆ ಫೆ.07 :ನರೇಗಾ ಯೋಜನೆ ಜಾರಿಗೆ ಬಂದ ನಂತರ ಇಡೀ ಕರ್ನಾಟಕದಾದ್ಯಂತ ಗ್ರಾಮಾಂತರ ಪ್ರದೇಶಗಳು ಅಭಿವೃದ್ಧಿಯಾಗುತ್ತಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು. ಸೋಮವಾರ ಹೊನ್ನಾಳಿ…

ದಾವಣಗೆರೆ ಫೆ.07 :ನರೇಗಾ ಯೋಜನೆ ಜಾರಿಗೆ ಬಂದ ನಂತರ ಇಡೀ ಕರ್ನಾಟಕದಾದ್ಯಂತ ಗ್ರಾಮಾಂತರ ಪ್ರದೇಶಗಳು ಅಭಿವೃದ್ಧಿಯಾಗುತ್ತಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.

ಸೋಮವಾರ ಹೊನ್ನಾಳಿ ತಾಲ್ಲೂಕಿನ ಅರಕೆರೆ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಲಾದ ರಾಜೀವ್ ಗಾಂಧಿ ಸೇವಾ ಕೇಂದ್ರ, ನೂತನ ಗ್ರಾಮ ಪಂಚಾಯಿತಿ ಕಟ್ಟಡ ಮತ್ತು ಘನತ್ಯಾಜ್ಯ ವಿಲೇವಾರಿ ಘಟಕ ಹಾಗೂ ಸೋಲಾರ್ ಪ್ಯಾನೆಲ್ ಉದ್ಘಾಟಿಸಿ ಅವರು ಮಾತಾನಾಡಿದರು.

ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕರ್ನಾಟಕದ 6000 ಗ್ರಾಮ ಪಂಚಾಯತಿಗಳಿಗೆ ಸ್ವಂತ ಕಟ್ಟಡ ನಿರ್ಮಿಸಲಾಗುತ್ತಿದೆ. ಗ್ರಾಮ ಪಂಚಾಯಿತಿ ಕಟ್ಟಡಗಳು ಗ್ರಾಮೀಣ ಜನರ ಬೆವರಹನಿಯ ಪ್ರತಿಫಲವಾಗಿವೆ. ಉದ್ಯೋಗ ಖಾತರಿ ಯೋಜನೆಯಡಿ ಈ ಹಿಂದೆ 13 ಕೋಟಿ ಮಾನವ ದಿನಗಳ ಗುರಿ ನಿಗದಿಪಡಿಸಲಾಗಿತ್ತು, ನವೆಂಬರ್ ತಿಂಗಳ ಹೊತ್ತಿಗೆ ಅವುಗಳನ್ನು ಸಂಪೂರ್ಣವಾಗಿ ಬಳಕೆ ಮಾಡಿಕೊಂಡು 1.40 ಕೋಟಿ ಹೆಚ್ಚಿನ ಮಾನವ ದಿನಗಳ ಬೇಡಿಕೆ ನೀಡಿ, ಆ ದಿನಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ. ಈ ಹಿಂದೆ ಉದ್ಯೋಗ ಖಾತ್ರಿಯಡಿ ಕೆಲಸ ಮಾಡಿದ ಕಾರ್ಮಿಕರಿಗೆ ಕೂಲಿ ಪಾವತಿ ಮಾಡಲು 8 ತಿಂಗಳುಗಳ ಕಾಲ ಕಾಯಬೇಕಿತ್ತು ಆದರೆ ಪ್ರಸ್ತುತ ದಿನಗಳಲ್ಲಿ ಬಡವರಿಗೆ ಮತ್ತು ಕಾರ್ಮಿಕರಿಗೆ ಅನುಕೂಲ ಆಗಲಿ ಎನ್ನುವ ದೃಷ್ಟಿಯಿಂದ ನೇರವಾಗಿ ಕೂಲಿ ಹಣವನ್ನು 2 ರಿಂದ 3 ತಿಂಗಳಲ್ಲಿ ಅವರ ಖಾತೆಗಳಿಗೆ ಜಮಾ ಮಾಡಲಾಗುತ್ತಿದೆ ಎಂದು ತಿಳಿಸಿದರು.

Vijayaprabha Mobile App free

ರಾಜ್ಯದ ಎಲ್ಲಾ ಗ್ರಾಮಗಳಲ್ಲಿ ಪ್ರತಿಮನೆಗೂ ಕುಡಿಯುವ ನೀರನ್ನು ನಲ್ಲಿಯ ಮೂಲಕ ಸರಬರಾಜು ಮಾಡುವ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಹೊನ್ನಾಳಿ ತಾಲ್ಲೂಕಿನಲ್ಲಿಯೂ ಕೂಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೊಳಿಸಲಾಗಿದೆ. 2023 ರೊಳಗೆ ಕರ್ನಾಟಕದ ಎಲ್ಲಾ ಮನೆಗಳಿಗೂ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲಾಗುವುದು. ದಾವಣಗೆರೆಯಲ್ಲಿ ಒಟ್ಟು 195 ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳ ನಿರ್ಮಾಣ ಮಾಡಲಾಗುತ್ತಿದೆ. ಈಗಾಗಲೇ 100 ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪನೆ ಮಾಡಲಾಗಿದೆ. ಜೊತೆಗೆ ಅಮೃತ ಯೋಜನೆಯಡಿ 750 ಗ್ರಾಮ ಪಂಚಾಯಿತಿಗಳಿಗೆ ತಲಾ 25 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಸೋಲಾರ್ ಗ್ರೀಡ್ ಮೂಲಕ ವಿದ್ಯುತ್ ಉತ್ಪಾದನೆ ಮಾಡಿ ಅದನ್ನು ಬಳಕೆ ಮಾಡಿಕೊಂಡು ಉಳಿದ ವಿದ್ಯುತ್ ಮಾರಾಟ ಮಾಡಿ ಆ ಹಣವನ್ನು ಗ್ರಾಮ ಪಂಚಾಯಿತಿಗಳಿಗೆ ವಾಪಸ್ಸು ನೀಡಲಾಗುವುದು, ಗ್ರಾಮದ ಅಭಿವೃದ್ಧಿಗೆ ನಾವೆಲ್ಲರೂ ಶ್ರಮಿಸಬೇಕು ಎಂದರು.

ಕೋವಿಡ್ ನಿಯಂತ್ರಣದಲ್ಲಿ ವಿಶ್ವದಲ್ಲೇ ಭಾರತ ಪ್ರಥಮ ಸ್ಥಾನದಲ್ಲಿದೆ. ಭಾರತದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಅದರಲ್ಲೂ ಹೊನ್ನಾಳಿ ತಾಲ್ಲೂಕು ಪ್ರಥಮ ಸ್ಥಾನದಲ್ಲಿದೆ ಎಂದು ಶ್ಲಾಘಿಸಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಮಾತನಾಡಿ, ರಾಜ್ಯದಲ್ಲಿ ಗ್ರಾಮಗಳ ಅಭಿವೃದ್ಧಿ, ಸ್ವಚ್ಛತೆ ಕಾಪಾಡುವುದು ಮಹಾತ್ಮ ಗಾಂಧೀಜಿಯವರ ಕನಸಾಗಿತ್ತು ಅದನ್ನು ಕರ್ನಾಟಕದಲ್ಲಿ ಸಚಿವರಾದ ಈಶ್ವರಪ್ಪನವರು ನನಸು ಮಾಡುವ ಉದ್ದೇಶದಿಂದ ಅನೇಕ ಯೋಜನೆಗಳನ್ನು ರೂಪಿಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಾಯೋಜಿತ ಜಲ ಜೀವನ್ ಮಿಷನ್ ಯೋಜನೆಯ ಮೂಲಕ ಪ್ರತಿ ಮನೆಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದರು.

ನರೇಗಾ ಯೋಜನೆಯಡಿ ಮಾನವ ದಿನಗಳನ್ನು 100 ರಿಂದ 150 ಕ್ಕೆ ಹೆಚ್ಚಿಸಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಕೆರೆಗಳ ಹೂಳು ಎತ್ತುವುದು, ಅಂತರ್ಜಲ ವೃದ್ಧಿಸುವುದು ಸೇರಿದಂತೆ ತೋಟಗಾರಿಕೆ ಇಲಾಖೆಯ ಮೂಲಕ ಅನೇಕ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಮೂಲಕ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಗ್ರಾಮಗಳಲ್ಲಿ ಕಸ ವಿಲೇವಾರಿ ಮಾಡಲು 27 ಘನತ್ಯಾಜ್ಯ ವಿಲೇವಾರಿ ವಾಹನಗಳನ್ನು ನೀಡಲಾಗಿದೆ. 300 ಜನ ಎಸ್‍ಸಿ, ಎಸ್‍ಟಿ ರೈತರಿಗೆ ಪೈಪು ಮತ್ತು ಪಂಪ್‍ಸೆಟ್ಟುಗಳನ್ನು ವಿತರಿಸಲಾಗಿದೆ, ಅರಕೆರೆ ಗ್ರಾಮದಲ್ಲಿ ಅಂದಾಜು 4 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಎ. ಬಿ. ರಂಗಪ್ಪ, ಹೊನ್ನಾಳಿ ತಹಶೀಲ್ದಾರ್ ಬಸವರಾಜ್, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಮ ಭೋವಿ, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಜಿ.ಎಸ್. ಅಜ್ಜಪ್ಪ, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಕೆ. ಎಸ್. ಮಂಜುಳ ಶಂಕ್ರಚಾರಿ, ಎ. ಬಿ ಹನುಮಂತಪ್ಪ ಅರಕೆರೆ, ಗ್ರಾ ಪಂ ಸದಸ್ಯರು ಹಾಗೂ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು..

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.