ಬೆಂಗಳೂರು: ನಗರದಲ್ಲಿ ಏಪ್ರಿಲ್-ಮೇ ತಿಂಗಳಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. ಈ ಬಾರಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 36 ರಿಂದ 38 ಡಿಗ್ರಿ ಸೆಲ್ಸಿಯಸ್ಗೆ ಏರಿಕೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಇದು 39 ಡಿಗ್ರಿ ಸೆಲ್ಸಿಯಸ್ಗೆ ಏರಬಹುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 33 ರಿಂದ 35 ಡಿಗ್ರಿ ಸೆಲ್ಸಿಯಸ್:
ಮುಂದಿನ ಒಂದು ವಾರಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮುಂದಿನ 7 ದಿನಗಳವರೆಗೆ ಗರಿಷ್ಠ ಉಷ್ಣಾಂಶ 31 ರಿಂದ 33 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉತ್ತರ ಒಳನಾಡಿನಲ್ಲಿ ಕಲಬುರಗಿಯಲ್ಲಿ 31ರಿಂದ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮಂಗಳೂರು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 33ರಿಂದ 35 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಾಪಮಾನ ಹೆಚ್ಚಳಕ್ಕೆ ಕಾರಣವೇನು?:
ಹವಾಮಾನ ವೈಪರೀತ್ಯಗಳಿಂದಾಗಿ ಈ ಬೇಸಿಗೆಯಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆಯಿದೆ. ಗಾಳಿಯಲ್ಲಿನ ಕಡಿಮೆ ತೇವಾಂಶ, ಕಡಿಮೆ ಮಳೆ ಮತ್ತು ಇತರ ಕಾರಣಗಳಿಂದಾಗಿ ಈ ಬೇಸಿಗೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ನಿರೀಕ್ಷಿಸಬಹುದು ಎಂದು ಮೂಲಗಳು ತಿಳಿಸಿವೆ.