ಕಾರವಾರ: ಮುರುಡೇಶ್ವರದಲ್ಲಿ ಮಹಾ ಶಿವರಾತ್ರಿ ಜಾಗರಣೆ ಉತ್ಸವ ಪ್ರತಿ ವರ್ಷ ನಿರಂತರವಾಗಿ ನಡೆಯಲಿದ್ದು, ಈ ಬಾರಿಯ ಉತ್ಸವಕ್ಕೆ ಸರಕಾರದಿಂದ ರೂ. 50 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ ವೈದ್ಯ ಹೇಳಿದರು.
ಅವರು ಬುಧವಾರ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಮುರುಡೇಶ್ವರದಲ್ಲಿ ಆಯೋಜಿಸಿದ್ದ ಮಹಾಶಿವರಾತ್ರಿ ಜಾಗರಣೆ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮುರುಡೇಶ್ವರ ದಲ್ಲಿ 400 ಕೋಟಿ ರೂ ವೆಚ್ಚದಲ್ಲಿ ಬಂದರು ನಿರ್ಮಾಣ ಕಾಮಗಾರಿಯನ್ನು ಮೀನುಗಾರಿಕೆ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಉದ್ದೇಶದಿಂದ ಆರಂಭಿಸಲಾಗುತ್ತಿದ್ದು, ಮುರುಡೇಶ್ವರಕ್ಕೆ ಆಗಮಿಸುವ ಪ್ರವಾಸಿಗರಿಗೆ ಉತ್ತಮ ಸೌಲಭ್ಯ ಒದಗಿಸಲಾಗುವುದು ಹಾಗೂ ಇನ್ನೂ ಹೆಚ್ಚಿನ ಅನುದಾನ ತಂದು ಮುರುಡೇಶ್ವರವನ್ನು ಅಭಿವೃದ್ಧಿ ಮಾಡಲಾಗುವುದು ಎಂದರು.
ರಾಜ್ಯ ಸರ್ಕಾರವು ಗ್ಯಾರೆಂಟಿ ಯೋಜನೆಗಳಿಗಾಗಿ ಪ್ರತಿ ವರ್ಷ 56,000 ಕೋಟಿ ಅನುದಾನ ನೀಡುತ್ತಿದ್ದು, ಈ ಮೂಲಕ ರಾಜ್ಯದ ಎಲ್ಲಾ ವರ್ಗದ ಜನತೆಯ ಅಭಿವೃದ್ಧಿಗೆ ಬದ್ದವಾಗಿದೆ ಎಂದರು. ಮುರುಡೇಶ್ವರ ನನ್ನ ಜನ್ಮಭೂಮಿ ಮತ್ತು ಕರ್ಮಭೂಮಿ ಕೂಡಾ ಆಗಿದೆ. ಇಲ್ಲಿ ಶಿವರಾತ್ರಿ ಉತ್ಸವವನ್ನು ನಡೆಸಲು ಸ್ಥಳೀಯ ಉದ್ಯಮಿಗಳ ಸಹಕಾರ ನೀಡಿದ್ದಾರೆ. ಸ್ವಯಂ ಸೇವಕರು ಉತ್ತಮ ಕಾರ್ಯ ಮಾಡಿದ್ದಾರೆ ಎಂದರು.
ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಮಾತನಾಡಿ,ಬಾಲ್ಯದಲ್ಲಿ ನನ್ನ ಊರಾದ ತಮಿಳುನಾಡಿನ ತಿರುವನೈಲಿಯಲ್ಲಿ ಇದೆ ರೀತಿ ಶಿವರಾತಿ ಉತ್ಸವ ನೋಡುತ್ತಿದ್ದೆ. ಈಗ ಮುರುಡೇಶ್ವರದಲ್ಲಿ ಶಿವರಾತ್ರಿ ಉತ್ಸವದಲ್ಲಿ ಭಾಗವಹಿಸುತ್ತಿದ್ದು ಬಾಲ್ಯದ ನೆನಪು ಈಗ ಮರುಕಳಿಸಿದೆ. ಈ ಬಾರಿ ಮುರುಡೇಶ್ವರಕ್ಕೆ ಪಾದಯಾತ್ರೆಯ ಮೂಲಕ ಬರುವ ಭಕ್ತಾಧಿಗಳಿಗೆ ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್ ವ್ಯವಸ್ಥೆ ಮಾಡಿದೆ. ಶಿವರಾತ್ರಿ ಜಾಗರಣೆ ಕಾರ್ಯಕ್ರಮದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್, ಆರೋಗ್ಯ ವ್ಯವಸ್ಥೆ ಮಾಡಿದೆ, ಪೊಲೀಸ್ ಹೆಲ್ಫ್ ಡೆಸ್ಕ್ ತೆರೆಯಲಾಗಿದೆ ಹಾಗೂ ಹೆಚ್ಚುವರಿ ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸತೀಶ ನಾಯ್ಕ, ಮಾವಳ್ಳಿ-1 ಗ್ರಾಮ ಪಂಚಾಯತಿ ಅಧ್ಯಕ್ಷೆ ನಯನಾ ನಾಯ್ಕ, ಮಾವಳ್ಳಿ-2 ಗ್ರಾಮ ಪಂಚಾಯತಿ ಅಧ್ಯಕ್ಷೆ ನಾಗರತ್ನ ಪಡಿಯಾರ, ಜಿಲ್ಲಾ ಪಂಚಾಯತ್ ಸಿಇಒ ಈಶ್ವರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಮ್ ನಾರಾಯಣ, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಉಪ ವಿಭಾಗಾಧಿಕಾರಿ ಕೆ. ಕಾವ್ಯಾರಾಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಯೋಗೇಶ,ತಹಸೀಲ್ದಾರ್ ನಾಗೇಂದ್ರ, ಡಿವೈಎಸ್ಪಿ ಮಹೇಶ ಎಂ.ಕೆ, ಮುರುಡೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಜಯರಾಮ ಅಡಿಗ, ದೇವಸ್ಥಾನದ ವ್ಯವಸ್ಥಾಪಕ ಮಂಜುನಾಥ ಶೆಟ್ಟಿ, ಮುರಡೇಶ್ವರ ಗ್ರಾಮೀಣ ಪ್ರತಿಷ್ಠಾನದ ಅಧ್ಯಕ್ಷ ಎಸ್ ಎಸ್ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.