ಬೆಂಗಳೂರು: ಹೆಮ್ಮಾರಿ ಸೋಂಕಿನಿಂದ ಶೈಕ್ಷಣಿಕ ಕ್ಷೇತ್ರದ ಧಿಕ್ಕೆ ಬದಲಾಗಿದೆ. ಕೆಲವು ಪರೀಕ್ಷೆಗಳನ್ನು ರದ್ದುಗೊಳಿಸಿದ ಸರ್ಕಾರ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯಾವುದಾದರೂ ಮಾದರಿಯಲ್ಲಿ ಪರೀಕ್ಷೆ ನಡೆಸಲು ಮುಂದಾಗಿದ್ದು, ಕೊವಿಡ್ ನಿಯಂತ್ರಣಕ್ಕೆ ಬಂದ ಬಳಿಕ ಪರೀಕ್ಷೆಗಳನ್ನು ನಡೆಸುವುದು ಸೂಕ್ತವಾಗಿದ್ದು, ಮುಂಚೆಯೇ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಭಿಪ್ರಾಯ ಪಟ್ಟಿದ್ದಾರೆ.
ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಸೇರಿದಂತೆ ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರು ಉಪಸ್ಥಿತರಿದ್ದ ಸಭೆಯಲ್ಲಿ ಸಚಿವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆಗೆ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವ ಕಾರ್ಯ ಪೂರ್ಣಗೊಳಿಸಲಾಗಿದ್ದು, ಪರೀಕ್ಷಾ ಕೇಂದ್ರಗಳನ್ನು ಗಣನೀಯವಾಗಿ ಹೆಚ್ಚಿಸಲಾಗುತ್ತಿದೆ. ಇನ್ನು ಅತ್ಯಂತ ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಪೂರ್ವ ಸಿದ್ಧತೆಗಳನ್ನು ತೆಗೆದುಕೊಳ್ಳಲಾಗಿದ್ದು, ಒಂದು ವೇಳೆ ಜುಲೈ ತಿಂಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾದಲ್ಲಿ ಆಗಸ್ಟ್ ಲ್ಲಿ ಪರೀಕ್ಷಾ ಫಲಿತಾಂಶವನ್ನು ಘೋಷಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ವ್ಯಕಪಡಿಸಿದ್ದಾರೆ.
ಹಾಗಾಗಿ ನೀಟ್/ಜೆಇಇ/ಸಿಇಟಿ/ಐಸಿಎಆರ್/ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಗಸ್ಟ್ ಮಾಹೆಯ ಸೂಕ್ತ ದಿನಾಂಕಗಳಂದು ಆಯೋಜಿಸಬಹುದಾಗಿದೆಯೆಂದೂ ಸುರೇಶ್ ಕುಮಾರ್ ಸಲಹೆ ನೀಡಿದ್ದು, ರಾಜ್ಯಕ್ಕೆ ಕಳೆದ ಸಾಲಿನಲ್ಲಿ ಕೊವಿಡ್ ಸಂದರ್ಭದಲ್ಲಿಯೂ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ನಡೆಸಿದ ಅನುಭವ ಇದೆ, ಈ ಅನುಭವದ ಹಿನ್ನೆಲೆಯಲ್ಲಿ ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆಗಳನ್ನು ಸಮರ್ಥವಾಗಿ ಆಯೋಜಿಸುವ ಯೋಜನೆಯನ್ನು ಸರ್ಕಾರ ಹೊಂದಿದೆ ಎಂದು ತಿಳಿಸಿದ್ದಾರೆ.