ಬೆಂಗಳೂರು: ರಾಜ್ಯ ಸರ್ಕಾರ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ನ.2 ರಿಂದ ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳ ಸಿಬ್ಬಂದಿ ಮತ್ತು ಶಿಕ್ಷಕರು ಕಡ್ಡಾಯವಾಗಿ ಶಾಲೆಗೆ ಹಾಜರಾಗುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ ಅವಧಿಯಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಕರೆಸಬಾರದು ಎಂದು ಶಿಕ್ಷಣ ಇಲಾಖೆ ಸ್ಪಷ್ಟ ನಿರ್ದೇಶನ ನೀಡಿದೆ.
ರಾಜ್ಯ ಸರ್ಕಾರದ ವಿದ್ಯಾಗಮ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಲ್ಲಾದ ಪ್ರಗತಿಯನ್ನು ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಕಲಿಕೆಗೆ ಬೇಕಾದ ಬೋಧನಾ ಕಲಿಕೆ ವಿಷಯವನ್ನು ರೂಪಿಸಲು ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.
ಸದ್ಯ ಡಿಎಸ್‌ಇಆರ್‌ಟಿಯ ಯೂಟ್ಯೂಬ್ ಚಾನೆಲ್ ಜ್ಞಾನದೀಪದಲ್ಲಿ ಅಳವಡಿಸಿರುವ ವಿಡಿಯೋಗಳು ಹಾಗೂ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪಾಠಗಳನ್ನು ನೋಡಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕು ಎಂದು ಸೂಚಿಸಿದೆ.
ಡಿಸೆಂಬರ್ 2ನೇ ವಾರದಲ್ಲಿ ಮಕ್ಕಳಿಗೆ ಶಾಲೆ?
ಶಾಲೆ ಪುನರಾರಂಭದ ಬಗ್ಗೆ ಸಾಧಕ, ಬಾಧಕಗಳ ಕುರಿತು ಚರ್ಚಿಸಲು ಶಿಕ್ಷಣ ಇಲಾಖೆಯ ಆಯುಕ್ತರು ನ.2ರಂದು ಎಲ್ಲ ಜಿಲ್ಲೆಗಳ ಉಪನಿರ್ದೇಶಕರ ಜೊತೆ ವಿಡಿಯೊ ಸಂವಾದ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಡಿಸೆಂಬರ್ ಎರಡನೇ ವಾರದ ವೇಳೆಗೆ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದ್ದು, ಮುಖ್ಯಮಂತ್ರಿ ಅವರೊಂದಿಗೆ ಇತ್ತೀಚೆಗೆ ನಡೆದ ಸಭೆಯಲ್ಲಿಯೂ ಈ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ. ಪದವಿ ಕಾಲೇಜುಗಳು ಪುನರಾರಂಭದ ನಂತರ ನಡೆಯುವ ಬೆಳವಣಿಗೆ ಗಮನಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎನ್ನಲಾಗಿದೆ.