ಮುಂಬೈ: ಮೀನು ತರಲೆಂದು ಪತಿಯ ಜತೆ ಬೈಕ್ ನಲ್ಲಿ ತೆರಳಿದ್ದಾಗ ಬಿಎಂಡಬ್ಲ್ಯೂ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಶಿವಸೇನೆ (ಏಕನಾಥ್ ಶಿಂಧೆ ಬಣ) ನಾಯಕ ರಾಜೇಶ್ ಶಾ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮುಂಬೈನ ವೊರ್ಲಿಯಲ್ಲಿ ರಾಜೇಶ್ ಶಾ ಅವರ ಪುತ್ರ ಮಿಹಿರ್ ಶಾ(24) ಕುಡಿದು ವಾಹನ ಚಲಾಯಿಸುವಾಗ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ಪತಿಯು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಮಿಹಿರ್ ಶಾ ಪರಾರಿಯಾಗಿದ್ದು, ಈಗ ಪೊಲೀಸರು ಅವರ ತಂದೆ ರಾಜೇಶ್ ಶಾ ಅವರನ್ನು ವಶಪಡಿಸಿಕೊಂಡಿದ್ದಾರೆ.
ರಾಜೇಶ್ ಶಾ ಅವರನ್ನು ಪಾಲ್ಘರ್ ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರು ರಾಜೇಶ್ ಶಾ ಅವರ ಹೆಸರಿನಲ್ಲಿ ನೋಂದಣಿಯಾಗಿರುವುದರಿಂದ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ ಕಾರು ಚಾಲಕ ರಾಜಋಷಿ ಬಿದಾವತ್ ಎಂಬುವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತ ಮಾಡಿದ ಕಾರನ್ನು ರಾಜೇಶ್ ಶಾ ಮಗ ಮಿಹಿರ್ ಶಾ ಚಲಾಯಿಸುತ್ತಿದ್ದ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಇದೀಗ ಮಿಹಿರ್ ಶಾ ಫೋನ್ ಸ್ವಿಚ್ ಆಫ್ ಮಾಡಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.