ಬೆಂಗಳೂರು : ಕೃಷಿಗೆ ಸಂಬಂದಿಸಿದ ಮಸೂದಿಗಳನ್ನು ತಿಡ್ಡುಪಡೆ ಮಾಡಲು ಹೊರಟಿರುವ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ಅವರು, “ವಿರೋಧಪಕ್ಷಗಳ ಅಭಿವ್ಯಕ್ತಿಯನ್ನು ಸ್ವಾತಂತ್ರ್ಯದ ಕೊರಳು ಹಿಚುಕಿ, ರೈತರ ಪಾಲಿಗೆ ಮರಣಶಾಸನವಾಗಿರುವ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ ( ಉತ್ತೇಜನ ಮತ್ತು ಸೌಲಭ್ಯ) ಮಸೂದೆಗೆ ಅಂಗೀಕಾರ ಪಡೆಯುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಸಂಸದೀಯ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದೆ.
ಕೃಷಿಗೆ ಸಂಬಂಧಿಸಿದ ಮೂರು ಪ್ರಮುಖ ಮಸೂದೆಗಳ ಬಗ್ಗೆ ಸಂಸತ್‌ನಲ್ಲಿ ವಿಸ್ತೃತ ಚರ್ಚೆಗೆ ಅವಕಾಶ ನೀಡಬೇಕು ಮತ್ತು ಮಸೂದೆಗಳನ್ನು ಆಯ್ಕೆ ಸಮಿತಿಯ ಪರಿಶೀಲನೆಗೊಳಪಡಿಸಬೇಕು ಎಂಬ ವಿರೋಧಪಕ್ಷಗಳ ಬೇಡಿಕೆಯನ್ನು ಈಡೇರಿಸಲು ಕೇಂದ್ರ ಬಿಜೆಪಿ ಸರ್ಕಾರ ಹಿಂದೇಟು ಹಾಕುತ್ತಿರುವುದು ಯಾಕೆ?
ದುರ್ಬಲರು,ಅಸಹಾಯಕರು ಮತ್ತು ಅಸಂಘಟಿತರಾಗಿರುವ ಶೇಕಡಾ 80ರಷ್ಟಿರುವ ಸಣ್ಣ ಮತ್ತು ಮಧ್ಯಮ ರೈತರು ಕೃಷಿಮಾರುಕಟ್ಟೆಯನ್ನು ಸರ್ಕಾರದ ನೆರವಿಲ್ಲದೆ ಸ್ವಯಂನಿಯಂತ್ರಿಸಲಾರರು. ಆ ಕೆಲಸ ಮಾಡುತ್ತಿದ್ದ ಎಪಿಎಂಸಿಯ ನಾಶವೆಂದರೆ ಪೂರ್ಣ ಕೃಷಿಕ್ಷೇತ್ರವನ್ನು ಮಣ್ಣುಪಾಲು ಮಾಡುವುದು.
ಹೊಸ ಎಪಿಎಂಸಿ ಆಕ್ಟ್ ಜಾರಿಗೆ ಬಂದ ನಂತರ ರಾಜ್ಯ ಸರ್ಕಾರಕ್ಕೆ ಎಂಪಿಎಂಸಿಯಿಂದ ಹೊರಗಿರುವ ವರ್ತಕರ ಮೇಲೆ ಯಾವ ನಿಯಂತ್ರಣವೂ ಇರುವುದಿಲ್ಲ. ಅವರ ವ್ಯವಹಾರದ ಮೇಲೆ ನಿಗಾ ಇಡುವಂತಿಲ್ಲ, ಶುಲ್ಕ,ಸೆಸ್,ಲೆವಿ ಸಂಗ್ರಹಿಸುವಂತಿಲ್ಲ.ಇದು ಖಾಸಗಿ ವರ್ತಕರ ಮುಂದೆ ಸರ್ಕಾರದ ಸಂಪೂರ್ಣ ಶರಣಾಗತಿ.
ಪ್ರಸ್ತುತ 6% ರೈತರು ಮಾತ್ರ ಎಪಿಎಂಸಿಗಳಲ್ಲಿ ಬೆಳೆ ಮಾರುತ್ತಿದ್ದು, 94% ರೈತರಿಗೆ ಮಾರುಕಟ್ಟೆ ಸೌಲಭ್ಯಗಳಿಲ್ಲ.ರೈತರಿಗೆ ನೆರವಾಗುವ ಉದ್ದೇಶ, ಕೇಂದ್ರ ಬಿಜೆಪಿ ಸರ್ಕಾರಕ್ಕೆ ಇದ್ದರೆ ಮಾರುಕಟ್ಟೆಗಳಿಲ್ಲದ ಕಡೆಗಳಲ್ಲಿ ಎಪಿಎಂಸಿ ಪರವಾನಿಗೆಯಿಂದ ಹೊಸ ಮಾರುಕಟ್ಟೆಗಳನ್ನು ಸ್ಥಾಪಿಸಬಹುದಲ್ಲಾ?
ನಮ್ಮಲ್ಲಿ ಪ್ರಜಾಸತ್ತಾತ್ಮಕವಾಗಿ ಚುನಾವಣೆಯಲ್ಲಿ ಆಯ್ಕೆಯಾದ ರೈತ ಪ್ರತಿನಿಧಿಗಳನ್ನೊಳಗೊಂಡ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳೇ ಕೇಂದ್ರ ಸರ್ಕಾರ ನಿಗದಿಪಡಿಸುವ ಬೆಂಬಲ ಬೆಲೆಯಂತೆ ಕೃಷಿ ಉತ್ಪನ್ನಗಳ ಬೆಲೆ ನಿರ್ಧರಿಸಿರುತ್ತವೆ. ಈ ವ್ಯವಸ್ಥೆಯ ನಾಶ ಯಾರ ಹಿತಕ್ಕಾಗಿ?
ಒಮ್ಮೆ ಈ ಬಹುರಾಷ್ಟ್ರೀಯ ಕಂಪೆನಿಗಳು ಹೊಸ ಕಾಯ್ದೆ ತಿದ್ದುಪಡಿ ಮೂಲಕ ಮೀಸೆ ತುರುಕಿಸಿ ಒಳಪ್ರವೇಶಿಸಿದರೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು ಅಪ್ರಸ್ತುತ ಗೊಳಿಸಿ, ನಾಶ ಮಾಡಲು ಬಹಳ ದಿನಗಳು ಬೇಕಾಗಲಾರದು. ರೈತ ಬಂಧುಗಳೇ ಎಚ್ಚರ ಇರಲಿ.
ಕೇಂದ್ರ ಸರ್ಕಾರದ ತಿದ್ದುಪಡಿ ಕಾಯ್ದೆಯನ್ನು ಕರ್ನಾಟಕ ಬಿಜೆಪಿ ಸರ್ಕಾರ ತಿದ್ದುಪಡಿ ಮಸೂದೆಯ ಮೂಲಕ ಅನುಮೋದಿಸಲು ಹೊರಟಿದೆ. ಕರ್ನಾಟಕ ಕಾಂಗ್ರೆಸ್ ವಿಧಾನಮಂಡಲದ ಎರಡೂ ಸದನಗಳ ಒಳಗೆ ಮತ್ತು ಹೊರಗೆ ಸಮಾನಮನಸ್ಕ ಸಂಘಟನೆಗಳ ಜೊತೆಗೂಡಿ ಇದನ್ನು ವಿರೋಧಿಸಲಿದೆ” ಎಂದು ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.
ವಿರೋಧಪಕ್ಷಗಳ ಅಭಿವ್ಯಕ್ತಿಯನ್ನು ಸ್ವಾತಂತ್ರ್ಯದ ಕೊರಳು ಹಿಚುಕಿ,
ರೈತರ ಪಾಲಿಗೆ ಮರಣಶಾಸನವಾಗಿರುವ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ ( ಉತ್ತೇಜನ ಮತ್ತು ಸೌಲಭ್ಯ) ಮಸೂದೆಗೆ ಅಂಗೀಕಾರ ಪಡೆಯುವ ಮೂಲಕ @BJP4India ಸರ್ಕಾರ ಸಂಸದೀಯ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದೆ.
1/12#APMCAct #WeAgainstFarmBills— Siddaramaiah (@siddaramaiah) September 21, 2020