ಬೆಂಗಳೂರು : ಗ್ರಾಮ ಪಂಚಾಯ್ತಿಗಳಿಗೆ ಮೂರು ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ, ಚುನಾವಣೆ ನಡೆಸಲು ಅಗತ್ಯವಾದ ಸಿದ್ಧತೆಗಳಿಗನ್ನು ಮಾಡಿಕೊಳ್ಳುವ ಮೂಲಕ ರಾಜ್ಯ ಚುನಾವಣಾ ಆಯೋಗ ಚುರುಕು ನೀಡಿದೆ.
ಮಸ್ಕಿ ಉಪ ಚುನಾವಣೆ ನಂತರ ರಾಜ್ಯದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಹಮತ ಸೂಚಿಸಿದೆ. ರಾಜ್ಯದ 5,800 ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ನಡೆಯಲಿದೆ. ಡಿಸೆಂಬರ್ ಮೊದಲ ವಾರದ ಒಳಗೆ ಚುನಾವಣೆಯ ದಿನಾಂಕ ಘೋಷಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಮಾಡಿಕೊಳ್ಳಬಹುದಾದ ಅಗತ್ಯ ಸಿದ್ಧತೆಗಳ ಬಗ್ಗೆ ನವಂಬರ್ 17 ರಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು(ಡಿಸಿ), ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್ ಪಿ) ಹಾಗು ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ (ಸಿಇಒ) ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.