ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವ ಪರಿಣಾಮ ರಾಜ್ಯದ ಹಲವೆಡೆ ಜನವರಿ 7 ರಿಂದ ಮತ್ತೆ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇನ್ನು ಎರಡು ದಿನಗಳ ಹಿಂದೆ ಮಲೆನಾಡಿನ ಹೆಬ್ಬಾಗಿಲು ಎಂದೇ ಪ್ರಸಿದ್ಧವಾಗಿರುವ ಶಿವಮೊಗ್ಗದಲ್ಲಿ ಅಕಾಲಿಕ ಮಳೆಯಿಂದ ರಸ್ತೆಯ ತುಂಬೆಲ್ಲ ನೀರು ತುಂಬಿಕೊಂಡು, ಚರಂಡಿಗಳು ತುಂಬಿ ಹರಿಯುತ್ತಿದ್ದು ಮಳೆಗಾಲವನ್ನು ನೆನಪಿಸುವಂತೆ ಮಾಡಿತ್ತು.
ಸುಳಿಗಾಳಿ ಎದ್ದಿರುವ ಪರಿಣಾಮ ಇನ್ನು ಮೂರೂ ನಾಲ್ಕು ದಿನ ಮೋಡ ಕವಿದ ವಾತಾವರಣ ಇರಲಿದ್ದು, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಸೇರಿದಂತೆ ರಾಜ್ಯದ ಹಲವೆಡೆ ಜನವರಿ 7 ರಿಂದ 2 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.