ತುಮಕೂರು: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಇಂದು ತುಮಕೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್ ಅವರು, ವೀರಶೈವ ಲಿಂಗಾಯತ ಸಮುದಾಯವನ್ನು ತಮ್ಮ ಕುರ್ಚಿ ಮತ್ತು ಮಗನ ಭವಿಷ್ಯದ ಲಾಭಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ಪಂಚಮಸಾಲಿ ಸಮುದಾಯದ ಸಮಾವೇಶವನ್ನು ವಿಫಲಗೊಳಿಸಲು ಷಡ್ಯಂತ್ರ ನಡೆಸುತ್ತಿದ್ದಾರೆ. ಅದಕ್ಕೆ ಆಸ್ಪದ ನೀಡದೆ ಐತಿಹಾಸಿಕ ಸಮಾವೇಶ ಮಾಡುತ್ತೇವೆ ಎಂದಿದ್ದಾರೆ.
ಪಂಚಮಸಾಲಿಗಳನ್ನು ಒಡೆಯುವ ಹುನ್ನಾರ:
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಪಂಚಮಸಾಲಿ ಸಮುದಾಯವನ್ನು ಒಡೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದು, ಈ ವೇಳೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎಂಟು ದಿನಗಳ ಕಾಲ ದೆಹಲಿಯಲ್ಲಿದ್ದರು.
ಅವರು ಅಲ್ಲಿಗೆ ಏಕೆ ಹೋಗಿದ್ದರು? ಅವರನ್ನು ಯಾವ ತನಿಖಾ ಸಂಸ್ಥೆ ವಿಚಾರಣೆಗೆ ಒಳಪಡಿಸುತ್ತಿತ್ತು? ಎಲ್ಲಿ ಏನು ನಡೆಯುತ್ತಿದೆ ಎಂಬುದು ನನ್ನ ಗಮನಕ್ಕೆ ಬರುತ್ತಿದೆ. ನಾನು ಯಾರೊಬ್ಬರಿಗೂ ಅಂಜುವುದಿಲ್ಲ ಎಂದು ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.