ಮಂಗಳೂರು: ಹಿರಿಯ ಸಾಹಿತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ನಾ.ಡಿಸೋಜ ಅವರು ಇಂದು ನಿಧನರಾದರು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಸಾಹಿತ್ಯ ಲೋಕದ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಅವರ ಕುಟುಂಬಸ್ಥರು, ಕಳೆದ ಹಲವು ದಿನಗಳಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ನಾ.ಡಿಸೋಜಾ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ಅವರು ಕೊನೆಯುಸಿರೆಳೆದಿದ್ದು, ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಹುಟ್ಟೂರು ಸಾಗರಕ್ಕೆ ಕೊಂಡೊಯ್ಯುವುದಾಗಿ ತಿಳಿಸಿದ್ದಾರೆ.
ಸಾಗರ ಪಟ್ಟಣದ ನಗರಸಭೆ ಆವರಣದಲ್ಲಿನ ಗಾಂಧಿ ಮೈದಾನದಲ್ಲಿ ಸಾಹಿತಿ ನಾ.ಡಿಸೋಜಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಇರಲಿದೆ. ಈ ಕುರಿತು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಜ.7 ರಂದು ಮೃತರ ಅಂತ್ಯಕ್ರಿಯೆಯನ್ನು ಸಾಗರಲ್ಲಿಯೇ ನೆರವೇರಿಸುವುದಾಗಿ ಕುಟುಂಬಸ್ಥರು ತಿಳಿಸಿದರು. ಡಾ. ನಾ.ಡಿಸೋಜ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಹಿರಿಯ ಸಾಹಿತಿ ಅಗಲಿಕೆಗೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.