ವಿಜಯನಗರ(ಹೊಸಪೇಟೆ),: ಹದಿನೆಂಟು ವರ್ಷ ತುಂಬಿದ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಬೇಕೆಂದು ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕರೆ ನೀಡಿದರು.
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮತದಾರರ ನೊಂದಣಿ ಕುರಿತಂತೆ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಜಾಪ್ರಭುತ್ವ ಯಶಸ್ವಿಯಾಗಲು ಎಲ್ಲರೂ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಬೇಕು. ಈ ನಿಟ್ಟಿನಲ್ಲಿ 18 ವರ್ಷ ತುಂಬಿದ ಯುವಕ, ಯುವತಿಯರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೊಂದಣಿ ಮಾಡಿಕೊಳ್ಳಬೇಕು. ಮತದಾನ ಪ್ರತಿಯೊಬ್ಬರ ಹಕ್ಕು, ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳುವ ಮೂಲಕ ಮತದಾನ ಮಾಡಬೇಕು ಎಂದು ತಿಳಿಸಿದರು.
ಯುವ ಮತದಾರರ ನೊಂದಣಿ ಬಹಳ ಕಡಿಮೆ ಇರುವುದರಿಂದ ಈ ಬಾರಿಗೆ ಶೇ.100 ರಷ್ಟು ನೊಂದಣಿಯಾಗಬೇಕು. ಇನ್ನು, ಯಾವುದೇ ಮತದಾರರು ಮತದಾನದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಅವರ ಅಂಕಿ-ಅಂಶಗಳನ್ನು ಸಂಗ್ರಹಿಸಿ 18 ವರ್ಷ ತುಂಬಿದ ಪ್ರತಿಯೊಬ್ಬ ಯುವಕ-ಯುವತಿಯರ ಹೆಸರನ್ನು ಆದಷ್ಟು ಬೇಗನೆ ಶೇ.100 ರಷ್ಟು ಕಡ್ಡಾಯವಾಗಿ ನೊಂದಣಿ ಮಾಡಿಸಲು ಕ್ರಮ ವಹಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.