ದಾವಣಗೆರೆ ನ.03: ನ.14 ರಿಂದ 17 ರವರೆಗೆ ದೀಪಾವಳಿ ಹಬ್ಬ ಆಚರಣೆ ಇದ್ದು, ಪ್ರಸ್ತುತ ಕೋವಿಡ್ 19 ಸಾಂಕ್ರಾಮಿಕ ರೋಗ ಹರಡುವ ಹಿನ್ನೆಲೆಯಲ್ಲಿ ಹಬ್ಬವನ್ನು ಸರಳವಾಗಿ ಮತ್ತು ಮಾಲಿನ್ಯ ರಹಿತವಾಗಿ ಆಚರಿಸುವ ಸಂಬಂಧ ಸರ್ಕಾರ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿಯಲ್ಲಿ ಮಾರ್ಗಸೂಚಿ ಬಿಡುಗಡೆಗೊಳಿಸಿ ಎಲ್ಲಾ ಇಲಾಖಾ ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಬೇಕೆಂದು ಆದೇಶಿಸಿದೆ.
ದಿ ಎಕ್ಸ್‍ಪ್ಲೊಸಿವ್ ರೂಲ್ಸ್ 2008 ನಿಯಮ 84 ರ ಪ್ರಕಾರ ದೀಪಾವಳಿ ಹಬ್ಬದ ಸಮಯದಲ್ಲಿ ಮಾತ್ರ ಜಿಲ್ಲಾಡಳಿತವು ನಿಗದಿಪಡಿಸುವ ಸ್ಥಳದಲ್ಲಿ ಅಲ್ಪ ಪ್ರಮಾಣದಲ್ಲಿ ಪಟಾಕಿ ಮಾರಾಟ ಮಾಡಲು ನಿಗದಿತ ಅವಧಿಗೆ ಮಾತ್ರ ತಾತ್ಕಾಲಿಕ ಪರವಾನಿಗೆಯನ್ನು ನೀಡಲಾಗುತ್ತಿರುತ್ತದೆ ಮತ್ತು ಸ್ಪೋಟಕ ಇಲಾಖೆ, ಮಂಗಳೂರು ಅವರಿಂದ ಪಡೆದ ಪರವಾನಿಗೆದಾರರು ಸಹ ಹಬ್ಬದ ಸಮಯದಲ್ಲಿ ಜಿಲ್ಲಾಡಳಿತವು ಸೂಚಿಸುವ ಸ್ಥಳದಲ್ಲಿ ಪಟಾಕಿ ಮಾರಾಟವನ್ನು ಮಾಡುತ್ತಿರುತ್ತಾರೆ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕೋವಿಡ್-19 ಸೋಂಕು ಹೆಚ್ಚಿನ ರೀತಿಯಲ್ಲಿ ಹರಡದಂತೆ ಸೋಂಕಿನ ಸರಪಳಿಯನ್ನು ಕಡಿತಗೊಳಿಸಲು ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಇರುತ್ತದೆ.
ಈ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರನ್ವಯ ದೀಪಾವಳಿ ಹಬ್ಬ ಆಚರಣೆ ಹಾಗೂ ಹಬ್ಬದಲ್ಲಿ ಪಟಾಕಿ, ಸಿಡಿಮದ್ದುಗಳನ್ನು ಮಾರಾಟ ಮಾಡುವುದು ಮತ್ತು ಸಿಡಿಸುವ ಕುರಿತು ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರು ಈ ಕೆಳಕಂಡಂತೆ ಮಾರ್ಗಸೂಚಿ ಹೊರಡಿಸಿದ್ದು ಈ ಮಾರ್ಗಸೂಚಿಗಳು ಹಬ್ಬದ ಆಚರಣೆ ಮುಗಿಯುವವರೆಗೆ ಮಾತ್ರ ಜಾರಿಯಲ್ಲಿರುತ್ತದೆ. ಈ ಮಾರ್ಗಸೂಚಿಗಳನ್ನು ಪೊಲೀಸ್ ಇಲಾಖೆ, ಮಹಾನಗರಪಾಲಿಕೆ, ಆರೋಗ್ಯ ಇಲಾಖೆ, ಅಗ್ನಿಶಾಮಕ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ತಾಲ್ಲೂಕು ಆಡಳಿತ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾ.ಪಂ ಮತ್ತು ಸಂಬಂಧಿಸಿದ ಇಲಾಖೆ/ಪ್ರಾಧಿಕಾರಗಳು ಅನುಷ್ಟಾನಗೊಳಿಸಬೇಕೆಂದು ಆದೇಶಿಸಿರುತ್ತಾರೆ.
ಮಾರ್ಗಸೂಚಿಗಳು :
• ಸಂಬಂಧಪಟ್ಟ ಇಲಾಖೆಯಿಂದ ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ಮಾತ್ರ ಪಟಾಕಿಯನ್ನು ಮಾರಾಟ ಮಾಡಲು ಅನುಮತಿಸತಕ್ಕದ್ದು .
• ಪಟಾಕಿ ಮಾರಾಟದ ಮಳಿಗೆಗಳನ್ನು ನ.1 ರಿಂದ 17 ರವರೆಗೆ ಮಾತ್ರ ತೆರೆದಿರತಕ್ಕದ್ದು.
• ಪರವಾನಿಗೆದಾರರು ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರದಿಂದ ನೀಡಿರುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಇಡಬೇಕು. ಬೇರೆ ಸ್ಥಳದಲ್ಲಿ ಮತ್ತು ದಿನಾಂಕಗಳಲ್ಲಿ ಅಂಗಡಿಗಳನ್ನು ತೆರೆಯಬಾರದು.
• ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಪಟಾಕಿ ಮಳಿಗೆಗಳನ್ನು ಸ್ಥಾಪಿಸಲು ಸಂಬಂಧಿಸಿದ ಇಲಾಖೆ ಮತ್ತು ಪ್ರಾಧಿಕಾರಗಳು ಅನುಮತಿ ನೀಡತಕ್ಕದ್ದು
• ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಮಾರಾಟ ಮಳಿಗೆಯಿಂದ ಇನ್ನೊಂದು ಮಳಿಗೆಗೆ 6 ಮೀಟರ್ ಅಂತರವಿರಬೇಕು.
• ಪ್ರತಿಯೊಂದು ಮಳಿಗೆಗಳಲ್ಲಿ ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರದಿಂದ ನೀಡಿರುವ ಪರವಾನಗಿ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸುವುದು. ಪರವಾನಗಿ ಪತ್ರವನ್ನು ಪಡೆದಂತವರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು.
• ಪಟಾಕಿ/ಸಿಡಿಮದ್ದುಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಪಟಾಕಿಗಳ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ಕನಿಷ್ಟ 06 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಕಟ್ಟುನಿಟ್ಟಾಗಿ ಪಾಲನೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು. ಪಟಾಕಿ ಮಾರುವ ವ್ಯಾಪಾರಸ್ಥರು, ಖರೀದಿಗೆ ಬರುವ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯ.
• ಪಟಾಕಿಯನ್ನು ಖರೀದಿಸುವ ಸಮಯದಲ್ಲಿ ಯಾವುದೇ ಜನದಟ್ಟಣೆಯಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳುವುದು.
• ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಅಲ್ಲದೇ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಸಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆ/ಕಾರ್ಪೊರೇಷನ್/ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.
• ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ/ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದೆ.