ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಂಡಮಾರುತ ಪರಿಣಾಮವಾಗಿ ತಮಿಳುನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಉಂಟಾದ ವಿದ್ಯುತ್ ಶಾರ್ಟ್ ಸರ್ಕ್ಯುಟ್‌ನಿಂದ ಓರ್ವ ಮೃತಪಟ್ಟಿದ್ದಾನೆ. ಭಾರೀ ಮಳೆ ಹಿನ್ನೆಲೆಯಲ್ಲಿ ಏಳು ಸಬ್‌ವೇಗಳನ್ನು ಬಂದ್ ಮಾಡಲಾಗಿದೆ.
ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸೋಮವಾರ ಮತ್ತು ಮಂಗಳವಾರ ಕೊಡಗು ಜಿಲ್ಲೆಗೆ, ಸೋಮವಾರ ಒಂದು ದಿನ ಮೈಸೂರು ಜಿಲ್ಲೆಗೆ ಆರೆಂಜ್ ಅಲರ್ಟ್, ರಾಮನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ ಜಿಲ್ಲೆಗೆ ನಾಳೆಯಿಂದ ಮೂರು ದಿನ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉಳಿದಂತೆ ಮೈಸೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಜೊತೆಗೆ ಭಾನುವಾರ ಮತ್ತು ಮಂಗಳವಾರ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮೂರು ದಿನಗಳ ಕಾಲ ದಕ್ಷಿಣ ಒಳನಾಡಿನ ಕರ್ನಾಟಕದ ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 1 ರಿಂದ 2 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.