ಹರಪನಹಳ್ಳಿ : ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿರುವ ನ್ಯಾಯಾಧೀಶರ ವಿರುದ್ದ ದೇಶ ದ್ರೋಹ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಘಟಕದ ಕಾರ್ಯಕರ್ತರು ಹರಪನಹಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.
ಹರಪನಹಳ್ಳಿ ಪಟ್ಟಣದ ತಾಲ್ಲೂಕು ಮಿನಿ ವಿಧಾನಸೌಧದ ಆವರಣದಲ್ಲಿ ಜಮಾಯಿಸಿದ ಕಾರ್ಯಕರ್ತರು, ಬಹಿರಂಗ ಸಭೆ ನಡೆಸಿ, ರಾಯಚೂರು ಜಿಲ್ಲಾ ನ್ಯಾಯಧೀಶರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಬಳಿಕ ತಹಶೀಲ್ದಾರ್ ನಂದೀಶ್ ಅವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕು ಸಂಚಾಲಕ ಆರ್. ಕೆ. ಮಂಜಪ್ಪ ಅವರು ಮಾತನಾಡಿ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಮಾಡಿರುವ ಅಪಮಾನ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತಂದಿದ್ದು, ನ್ಯಾಯ ದಾನ ಮಾಡುವ ಸ್ಥಾನದಲ್ಲಿ ಕುಳಿತು, ಈ ರೀತಿ ತಾರತಮ್ಯ ಎಸಗಿರುವುದು ಅಪರಾಧ ಎಂದು ಆಕ್ರೋಶ ವ್ಯಕ್ತಪಡಿಸಿದರು.