ಹರಪನಹಳ್ಳಿ: ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಮುಖ್ಯ ರಸ್ತೆಯಾದ ಹರಪನಹಳ್ಳಿ-ಹೊಸಪೇಟೆ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಜೀವ ಕಳೆದುಕೊಳ್ಳುವ ಆತಂಕದಲ್ಲಿಯೇ ಸಂಚರಿಸುತ್ತಿದ್ದಾರೆ.
ಹೌದು, ಹರಪನಹಳ್ಳಿ-ಹೊಸಪೇಟೆ ಮುಖ್ಯ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿದ್ದು, ಕಾಲೇಜು ವಿದ್ಯಾರ್ಥಿಗಳು, ನೌಕರರು, ಜನಸಾಮಾನ್ಯರು ಸೇರಿದಂತೆ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಆದರೆ, ಈ ರಸ್ತೆಯ ದುರಸ್ತಿ ಕಾರ್ಯ ಕೈಗೊಳ್ಳದೇ ಕೆಂಪು ಮಣ್ಣನ್ನು ತಂದು ಹಾಕಿದ್ದು, ಈಗ ದಿನನಿತ್ಯ ಮಳೆ ಸುರಿಯುತ್ತಿರುವ ಕಾರಣ, ರಸ್ತೆಗೆ ಮಣ್ಣು ಹಾಕಿದ್ದರಿಂದ ವಾಹನ ಸಂಚರಿಸುವ ಮುಖ್ಯರಸ್ತೆಯೇ ಕೆಸರು ಗದ್ದೆಯಾಗಿ ಪರಿಣಮಿಸಿದೆ.
ಇದರಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಅಪಘಾತಕ್ಕೀಡಾಗಿ ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಹೆಚ್ಚಿದ್ದು, ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಶೀಘ್ರವೇ ದುರಸ್ತಿಯಾದ ರಸ್ತೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.