ಮಂಗಳೂರು: ಪಾಠ ಹೇಳಿಕೊಡಬೇಕಾದ ಶಿಕ್ಷಕ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನಲೆ ಅಪರಾಧಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶಿಸಿದೆ. ಶಿಕ್ಷಕನೊಬ್ಬನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಪೋಕ್ಸೋ) 5 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಶಾಲೆಯಲ್ಲಿ ಪಾಠ ಹೇಳಿಕೊಡುವ ನೆಪದಲ್ಲಿ ಶಿಕ್ಷಕ ಗುರುವ ಮೊಗೇರ ವಿದ್ಯಾರ್ಥಿನಿಯರನ್ನು ಶಾಲೆಯಲ್ಲಿರುವ ಪ್ರತ್ಯೇಕ ಕೊಠಡಿಗೆ ಕರೆಸಿಕೊಳ್ಳುತ್ತಿದ್ದ. ಈ ವೇಳೆ ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ವಿದ್ಯಾರ್ಥಿನಿಯರು ಶಾಲೆಯ ಮುಖ್ಯ ಶಿಕ್ಷಕರಿಗೆ ದೂರು ಸಲ್ಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡಿದ್ದ ನಗರ ಮಹಿಳಾ ಠಾಣೆಯ ಉಪನಿರೀಕ್ಷಕಿ ಶಿವರುದ್ರಮ್ಮ.ಎಸ್. ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಶೇಷ ಸರ್ಕಾರಿ ಅಭಿಯೋಜಕರಾದ ಸಹನಾದೇವಿ ಬೋಳೂರು ಸಂತ್ರಸ್ತೆ ಪರವಾಗಿ ವಾದ ಮಂಡಿಸಿದ್ದು, ಈ ಸಂಬಂಧ ಸಮಗ್ರ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಡಿ.ವಿನಯ್, ಆರೋಪ ಸಾಬೀತಾದ ಹಿನ್ನಲೆ ಶಿಕ್ಷಕನಿಗೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.