ಧಾರವಾಡ: ಮುಡಾ ಹಗರಣ ಮತ್ತು ವಾಲ್ಮೀಕಿ ನಿಗಮದ ಹಗರಣಗಳಿಂದಾಗಿ ಪ್ರತಿದಿನ ಕಾಂಗ್ರೆಸ್ ಸರ್ಕಾರ ವರ್ಚಸ್ಸು ಕಳೆದುಕೊಳ್ಳುತ್ತಿದ್ದು, ಈ ಹಿನ್ನಲೆ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಸಂಸದ ಜಗದೀಶ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ಧಿಸಂಸ್ಥೆಯೊಂದರೊಂದಿಗೆ ಮಾತನಾಡಿದ ಸಂಸದ ಶೆಟ್ಟರ್ ಸಂಡೂರು, ಶಿಗ್ಗಾಂವ್ ಹಾಗೂ ಚನ್ನಪಟ್ಟಣ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಲಿದೆ. ರಾಜ್ಯ ಸರ್ಕಾರದ ಹಗರಣಗಳ ಸರಮಾಲೆಯಿಂದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಇಮೇಜ್ ಕೂಡ ಕುಸಿಯುತ್ತಿದ್ದು. ಇದರ ಪರಿಣಾಮ ಬಿಜೆಪಿ ಗೆಲುವಿಗೆ ನೆರವಾಗಲಿದೆ ಎಂದರು.
ಇದೇ ಬರುವ ನವೆಂಬರ್ 13 ರಂದು ಶಿಗ್ಗಾಂವ್, ಸಂಡೂರು ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಿಗದಿಯಾಗಿದೆ. ನವೆಂಬರ್ 23 ರಂದು ಉಪಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಸಿ.ಪಿ.ಯೋಗೇಶ್ವರ್ ವಿರುದ್ಧ ಸ್ಪರ್ಧಿಸಿದ್ದು ಇಬ್ಬರೂ ಅಭ್ಯರ್ಥಿಗಳ ನಡುವೆ ಪ್ರಬಲ ಹಣಾಹಣಿ ನಡೆಯುವ ನಿರೀಕ್ಷೆ ಮೂಡಿಸಿದೆ.
ಇನ್ನು ಜಗದೀಶ ಶೆಟ್ಟರ್ ಅವರನ್ನು 18ನೇ ಲೋಕಸಭೆಯ ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಇದೇ ಸಂದರ್ಭದಲ್ಲಿ ಧನ್ಯವಾದ ಸಲ್ಲಿಸಿದ್ದಾರೆ.